ಬೆಂಗಳೂರು: ದೇಶದ ರಾಜಧಾನಿ ದೆಹಲಿಯಲ್ಲಿ ಯುಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಕರ್ನಾಟಕದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆಯೊಂದನ್ನು ನೀಡಿದೆ. ನಾಗರಿಕ ಸೇವಾ (Civil Services) ಆಕಾಂಕ್ಷಿಗಳಿಗಾಗಿಯೇ ದೆಹಲಿಯಲ್ಲಿ ಹೊಸದೊಂದು 'ಕರ್ನಾಟಕ ಭವನ'ವನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಶನಿವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ತಂಗಿ ಓದುತ್ತಿರುವ ಕರ್ನಾಟಕದ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಈ ವಿಶೇಷ ಯೋಜನೆಯನ್ನು ರೂಪಿಸಲಾಗಿದೆ. ಈ ನೂತನ ಭವನದಲ್ಲಿ ಶೇಕಡಾ 50 ರಷ್ಟು ವಸತಿ ಸೌಲಭ್ಯವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC/ST) ವಿದ್ಯಾರ್ಥಿಗಳಿಗೆ ಕಾಯ್ದಿರಿಸಲಾಗುವುದು. ಇನ್ನುಳಿದ ಸೀಟುಗಳನ್ನು ಇತರ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಮುಕ್ತವಾಗಿಡಲಾಗುವುದು ಎಂದು ತಿಳಿಸಿದರು.
ಕೇವಲ ವಸತಿ ಮಾತ್ರವಲ್ಲದೆ, ದೆಹಲಿಯಲ್ಲಿರುವ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ನಿವೃತ್ತ ಐಎಎಸ್ (IAS), ಐಆರ್‌ಎಸ್ (IRS) ಮತ್ತು ಐಪಿಎಸ್ (IPS) ಅಧಿಕಾರಿಗಳನ್ನು ಮೆಂಟರ್‌ಗಳಾಗಿ ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಯೋಜಿಸಿದೆ. ಇದರೊಂದಿಗೆ, ಸುಪ್ರೀಂ ಕೋರ್ಟ್ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ದೆಹಲಿಯಲ್ಲಿ ಪ್ರತ್ಯೇಕ ಕಾನೂನು ಕೋಶವನ್ನು ಸ್ಥಾಪಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ದೆಹಲಿಯಲ್ಲಿ ಕಠಿಣ ಸಿದ್ಧತೆ ನಡೆಸುತ್ತಿರುವ ಕನ್ನಡಿಗ ವಿದ್ಯಾರ್ಥಿಗಳಿಗೆ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ದೊಡ್ಡ ಬಲ ಸಿಕ್ಕಂತಾಗಲಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದಿಂದ ಶೀಘ್ರದಲ್ಲೇ ಮತ್ತಷ್ಟು ವಿವರಗಳು ಹೊರಬೀಳುವ ನಿರೀಕ್ಷೆಯಿದೆ.
PublicNext
20/06/2026 09:39 pm