ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣವಾದ ತ್ರಾಸಿ ಬೀಚ್‌ನ ಸಾರ್ವಜನಿಕ ಶೌಚಾಲಯದ ಪೈಪ್‌ಲೈನ್ ಒಡೆದು ಮಲಮೂತ್ರ ಸೋರಿಕೆಯಾಗುತ್ತಿದ್ದು, ಸಾರ್ವಜನಿಕರ ಆರೋಗ್ಯಕ್ಕೆ ತೀವ್ರ ಆತಂಕ ಎದುರಾಗಿದೆ.
ದಿನನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುವ ಈ ಕಡಲತೀರದ ಅಭಿವೃದ್ಧಿಗೆ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ.
ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಹಲವು ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಆದರೆ, ಸ್ಥಳೀಯ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಕಡಲತೀರದಲ್ಲಿ ನೈರ್ಮಲ್ಯದ ಹಳಿ ತಪ್ಪಿದೆ ಎಂದು ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೂಗು ಮುಚ್ಚಿ ಓಡಾಡುವ ಸ್ಥಿತಿ
ಶೌಚಾಲಯದಿಂದ ಹೊರಹೊಮ್ಮುತ್ತಿರುವ ಮಲಮೂತ್ರದ ನೀರು ಸುತ್ತಮುತ್ತಲಿನ ಪರಿಸರದಲ್ಲೇ ಹರಿಯುತ್ತಿರುವುದರಿಂದ ಇಡೀ ಪ್ರದೇಶದಲ್ಲಿ ದುರ್ವಾಸನೆ ವ್ಯಾಪಿಸಿದೆ. ಬೀಚ್‌ಗೆ ಬರುವ ಪ್ರವಾಸಿಗರು ಮೂಗು ಮುಚ್ಚಿಕೊಂಡೇ ಓಡಾಡಬೇಕಾದ ದಯನೀಯ ಸ್ಥಿತಿ ನಿರ್ಮಾಣವಾಗಿದೆ.
ಪ್ರವಾಸೋದ್ಯಮದ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿರುವ ಈ ಸ್ಥಳದಲ್ಲಿ ಅಗತ್ಯ ನಿರ್ವಹಣೆ ಹಾಗೂ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪ್ರಜ್ಞಾವಂತ ನಾಗರಿಕರು ಆರೋಪಿಸಿದ್ದಾರೆ. ಸಾರ್ವಜನಿಕರ ಆರೋಗ್ಯಕ್ಕೆ ಧಕ್ಕೆ ತರುತ್ತಿರುವ ಈ ಸಮಸ್ಯೆಯನ್ನು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ತಕ್ಷಣವೇ ಪರಿಹರಿಸಿ, ಶೌಚಾಲಯ ವ್ಯವಸ್ಥೆಯನ್ನು ಸುಧಾರಿಸಬೇಕೆಂದು ಸ್ಥಳೀಯರು ಮತ್ತು ಪ್ರವಾಸಿಗರು ಆಗ್ರಹಿಸಿದ್ದಾರೆ.
ವರದಿ: ದಾಮೋದರ ಮೊಗವೀರ ನಾಯಕವಾಡಿ, ಪಬ್ಲಿಕ್ ನೆಕ್ಸ್ಟ್, ಬೈಂದೂರು
PublicNext
20/06/2026 09:54 pm
LOADING...