ಹಾಸನ: ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಜುಲೈ 20ರಂದು ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಹೊಳೆನರಸೀಪುರ ತಾಲೂಕಿನ ಎಲ್ಲಾ ಶಾಲೆ ಹಾಗೂ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಗಣ್ಯರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆ, ಸಾರ್ವಜನಿಕ ಶಾಂತಿ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹೊಳೆನರಸೀಪುರ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳು, ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಎಲ್ಲಾ ಪದವಿ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ಇದೇ ವೇಳೆ, ಹೊಳೆನರಸೀಪುರ ಪಟ್ಟಣದ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಿ ಚೆನ್ನಮ್ಮ ಅವರಿಗೆ ಗೌರವ ಸಲ್ಲಿಸಲು ತೀರ್ಮಾನಿಸಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು, ಸ್ವಾಮೀಜಿಗಳು ಹಾಗೂ ಸಾರ್ವಜನಿಕರು ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದರು.
ಪ್ರಧಾನಮಂತ್ರಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೂರವಾಣಿ ಮೂಲಕ ಎಚ್.ಡಿ. ದೇವೇಗೌಡರಿಗೆ ಸಂತಾಪ ಸೂಚಿಸಿ ಧೈರ್ಯ ತುಂಬಿದ್ದಾರೆ.
ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಹರದನಹಳ್ಳಿಗೆ ಕೊಂಡೊಯ್ಯಲಾಗುತ್ತಿದ್ದು, ಕ್ಯಾತನಹಳ್ಳಿಯಲ್ಲಿ ಜುಲೈ 20ರಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
PublicNext
19/07/2026 10:22 pm
LOADING...