ಬಳ್ಳಾರಿ: ಎಪಿಎಂಸಿ ತರಕಾರಿ ಮಾರುಕಟ್ಟೆಗೆ ಹಮಾಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಮೂವರು ಅಪರಿಚಿತ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕೌಲ್‌ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಈದ್ಗಾ ಮೈದಾನ ಬಳಿಯ ಬೀಡಿ ಕಾಲೋನಿ ಪಕ್ಕದ ಲಾರಿ ಶೆಡ್ ಸಮೀಪ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಬೀಡಿ ಕಾಲೋನಿ ನಿವಾಸಿ ಹಾಗೂ ಹಲವು ವರ್ಷಗಳಿಂದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಹಮಾಲಿಯಾಗಿ ಕೆಲಸ ಮಾಡುತ್ತಿರುವ ಶಂಕರ್, ಎಂದಿನಂತೆ ಬೆಳಗಿನ ಜಾವ ಸುಮಾರು 3 ಗಂಟೆಗೆ ಕಾಲ್ನಡಿಗೆಯಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ, ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಬಂದ ಮೂವರು ಯುವಕರು ಕಲ್ಲು ಹಾಗೂ ಇತರ ವಸ್ತುಗಳಿಂದ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ಗಾಯಗೊಂಡ ಶಂಕರ್ ಕೌಲ್‌ಬಜಾರ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಘಟನೆಯ ದೃಶ್ಯಗಳು ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.
PublicNext
24/07/2026 06:48 pm
LOADING...