ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿಯಲ್ಲಿ ಬಾಲ್ಯ ವಿವಾಹ, ಪೋಕ್ಸೋ, ಸೈಬರ್ ಕ್ರೈಂ ವಿರುದ್ಧ ಜಾಗೃತಿ ಜಾಥಾ; ಹದಿಹರೆಯದ ಹೆಣ್ಣುಮಕ್ಕಳಿಗೆ ಕಾನೂನು ಅರಿವು

ಬಳ್ಳಾರಿ: ರೀಡ್ಸ್ ಸಂಸ್ಥೆ, ಬಳ್ಳಾರಿ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ನಿಷೇಧ, ಪೋಕ್ಸೋ, ಸೈಬರ್ ಕ್ರೈಂ, ಮಾದಕ ದ್ರವ್ಯ ಮುಕ್ತ ಸಮಾಜ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಜಿಲ್ಲಾ ಮಟ್ಟದ ಜಾಥಾ ಹಾಗೂ ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶವನ್ನು ಹಮ್ಮಿಕೊಳ್ಳಲಾಯಿತು.

ಜಾಥಾವು ಜಿಲ್ಲಾ ಪೊಲೀಸ್ ಕಚೇರಿಯಿಂದ ರಾಘವ ಕಲಾ ಮಂದಿರದವರೆಗೆ ನಡೆಯಿತು. ಬಳಿಕ ನಡೆದ ಸಮಾವೇಶದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀ ಸಿದ್ದಲಿಂಗ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ (ಐಪಿಎಸ್), ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀ ರಾಜೇಶ್ ಎನ್. ಹೊಸಮನೆ, ಹೆಚ್ಚುವರಿ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಸಿದ್ದಲಿಂಗ ಪ್ರಭು ಮಾತನಾಡಿ, ಪೋಕ್ಸೋ ವಿಶೇಷ ನ್ಯಾಯಾಲಯಗಳಿದ್ದರೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕಿದೆ. ಸಮಾಜ ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಿದಾಗ ಮಾತ್ರ ಸಮಾಜಕ್ಕೆ ಸರಿಯಾದ ಸಂದೇಶ ರವಾನೆಯಾಗುತ್ತದೆ ಎಂದರು.

ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬ್ಯಾಂಕಿಂಗ್ ವಂಚನೆ, ಉದ್ಯೋಗದ ಹೆಸರಿನ ವಂಚನೆ ಹಾಗೂ ಸಾಮಾಜಿಕ ಜಾಲತಾಣಗಳ ದುರ್ಬಳಕೆಯ ಬಗ್ಗೆ ವಿದ್ಯಾರ್ಥಿಗಳು ಎಚ್ಚರಿಕೆಯಿಂದಿರಬೇಕು. ಯುವತಿಯರ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು ಬೆದರಿಕೆ ಹಾಕುವಂತಹ ಪ್ರಕರಣಗಳಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಅವರು ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಮಾತನಾಡಿ, ಬಾಲ್ಯ ವಿವಾಹವು ಹೆಣ್ಣುಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯವನ್ನು ಅಂಧಕಾರಕ್ಕೆ ತಳ್ಳುವ ದುಷ್ಟ ಪದ್ಧತಿಯಾಗಿದೆ. ಬಾಲ್ಯ ವಿವಾಹ ಕಾಯ್ದೆಯಡಿ ಹೆಣ್ಣುಮಕ್ಕಳು ಅಪರಾಧಿಗಳಲ್ಲ, ಅವರು ಸಂತ್ರಸ್ತರು. ಮದುವೆ ಮಾಡಿಕೊಟ್ಟ ಪೋಷಕರು, ವರನ ಮನೆಯವರು ಹಾಗೂ ಮದುವೆಗೆ ಸಹಕರಿಸಿದವರೇ ಕಾನೂನಿನ ಮುಂದೆ ಅಪರಾಧಿಗಳಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಮಕ್ಕಳಿಗೆ ಕನಸು ಕಾಣಲು, ಶಿಕ್ಷಣ ಪಡೆಯಲು ಹಾಗೂ ಸಾಧನೆ ಮಾಡಲು ಅವಕಾಶ ನೀಡಬೇಕು. ಬಾಲ್ಯ ವಿವಾಹ ನಡೆಯುತ್ತಿರುವುದು ಕಂಡುಬಂದರೆ ತಕ್ಷಣವೇ ಸಂಬಂಧಿಸಿದ ಇಲಾಖೆಗೆ ಅಥವಾ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುತ್ತದೆ ಎಂದು ತಿಳಿಸಿದರು.

ಸ್ವಸಹಾಯ ಸಂಘಗಳ ಮಹಿಳೆಯರು ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸುವ ಮೂಲಕ ಬಾಲ್ಯ ವಿವಾಹ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಕರೆ ನೀಡಲಾಯಿತು. ಸಮಾವೇಶದಲ್ಲಿ ಹದಿಹರೆಯದ ಹೆಣ್ಣುಮಕ್ಕಳು ಬಾಲ್ಯ ವಿವಾಹದ ಕುರಿತು ತಮ್ಮ ಅನಿಸಿಕೆಗಳು ಹಾಗೂ ಅಭಿಪ್ರಾಯಗಳನ್ನು ಹಂಚಿಕೊಂಡರು.

Edited By :
PublicNext

PublicNext

25/07/2026 07:46 am

Cinque Terre

11.46 K

Cinque Terre

0

ಸಂಬಂಧಿತ ಸುದ್ದಿ