ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆಯಲ್ಲಿ ನಡೆದ ದಿವಂಗತ ಕೆ. ಆರ್. ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ, ಸಕ್ರಿಯ ರಾಜಕಾರಣದಲ್ಲೇ ಮುಂದುವರಿದು ಜನರ ಕಷ್ಟ-ಸುಖಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
"ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ, ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ನಾನು ತೀರ್ಮಾನಿಸಿದ್ದೇನೆ," ಎಂದು ಸಿದ್ದರಾಮಯ್ಯ ತಿಳಿಸಿದರು.
ಈ ವೇಳೆ ರಾಜಕೀಯದಲ್ಲಿ ಆಗಿರುವ ಬದಲಾವಣೆಗಳ ಕುರಿತು ಬೇಸರ ವ್ಯಕ್ತಪಡಿಸಿದ ಅವರು, "ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಕ್ಷೇತ್ರದ ಜನರೇ ಸ್ವಯಂಪ್ರೇರಿತರಾಗಿ ಸಹಾಯ ಮಾಡಿ ನಮ್ಮನ್ನು ಗೆಲ್ಲಿಸುತ್ತಿದ್ದರು. ಆದರೆ ಇಂದು ಆ ರೀತಿಯ ಪರಿಸ್ಥಿತಿ ಉಳಿದಿಲ್ಲ," ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಈ ಘೋಷಣೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರಲ್ಲಿ ಚರ್ಚೆಗೆ ಕಾರಣವಾಗಿದೆ.
PublicNext
26/07/2026 02:47 pm