ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಗಿಡ್ನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಮನೆಗಳ್ಳತನಕ್ಕೆ ಯತ್ನಿಸಿದ ಖತರ್ನಾಕ್ ಕಳ್ಳನೊಬ್ಬನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಗ್ರಾಮದ ಕೇಶವಪ್ಪ ಹಾಗೂ ದೇವರಾಜು ಎಂಬುವವರ ಮನೆಗಳಿಗೆ ತಡರಾತ್ರಿ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ವೇಳೆ ಮನೆಯವರು ಎಚ್ಚೆತ್ತುಕೊಂಡಿದ್ದಾರೆ. ಕೂಡಲೇ ಸ್ಥಳೀಯರ ಸಹಾಯದಿಂದ ಕಳ್ಳನನ್ನು ಹಿಡಿದು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳ್ಳ ಸಿಕ್ಕಿಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರು ಸ್ಥಳಕ್ಕೆ ಜಮಾಯಿಸಿದ್ದು, ಆತ ಪರಾರಿಯಾಗದಂತೆ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಹಿನ್ನೆಲೆ ಹಾಗೂ ಈತನಿಂದ ಈ ಹಿಂದೆ ನಡೆದಿರುವ ಕಳ್ಳತನ ಪ್ರಕರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಚಿಕ್ಕತೇಕಹಳ್ಳಿ ಡಿ. ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್, ಚಿಕ್ಕಬಳ್ಳಾಪುರ
PublicNext
28/07/2026 09:02 pm
LOADING...