ಹೊಸಪೇಟೆ : ಪೊಲೀಸ್ ಪೇದೆ (ಕಾನ್ಸ್ಟೇಬಲ್) ನೇಮಕಾತಿ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದೆ ಯಶಸ್ವಿಯಾಗಿಸಲು ಸುಸೂತ್ರ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ನಿಯೋಜನೆಗೊಂಡಿರುವ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾನ್ಸ್ಟೇಬಲ್ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ಅಥವಾ ಕರ್ತವ್ಯಲೋಪ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಆಗಸ್ಟ್ 2ರಂದು ಬೆಳಿಗ್ಗೆ ಸಮಯದಲ್ಲಿ 13 ಕೇಂದ್ರಗಳಲ್ಲಿ 6,098 ಹಾಗೂ ಮಧ್ಯಾಹ್ನ ಸಮಯದಲ್ಲಿ 12 ಪರೀಕ್ಷಾ ಕೇಂದ್ರಗಳಲ್ಲಿ 5,675 ಸೇರಿದಂತೆ ಒಟ್ಟು 11,773 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾರ್ಗಾಧಿಕಾರಿಗಳು ಸರಿಯಾದ ಸಮಯಕ್ಕೆ ಪ್ರಶ್ನೆಪತ್ರಿಕೆ ರವಾನೆ ಮಾಡಬೇಕು. ಪರೀಕ್ಷೆ ಮುಕ್ತಾಯವಾದ ನಂತರ ಉತ್ತರ ಪತ್ರಿಕೆಗಳನ್ನು ಸುರಕ್ಷಿತವಾಗಿ ಜಿಲ್ಲಾ ಖಜಾನೆಗೆ ತಲುಪಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಪರೀಕ್ಷಾ ಕೇಂದ್ರಕ್ಕೆ ಬಂದ ಅಭ್ಯರ್ಥಿಗಳ ಪ್ರವೇಶ ಪತ್ರ ಹಾಗೂ ಗುರುತಿನ ಚೀಟಿಯಲ್ಲಿರುವ ಹೆಸರು ಹೊಂದಾಣಿಕೆಯನ್ನು ಕಡ್ಡಾಯವಾಗಿ ಪರಿಶೀಲಿಸಿದ ನಂತರವೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಗಾಳಿ, ಬೆಳಕಿನ ವ್ಯವಸ್ಥೆ ಮತ್ತು ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಅಭ್ಯರ್ಥಿಗಳು ನಿಗದಿತ ವಸ್ತ್ರಸಂಹಿತೆಯನ್ನು ಪಾಲಿಸಬೇಕು. ಮೊಬೈಲ್ ಫೋನ್, ಬ್ಲೂಟೂತ್ ಸಾಧನ, ಎಲೆಕ್ಟ್ರಾನಿಕ್ ಪೆನ್, ಕೈಗಡಿಯಾರ, ಬೆಲ್ಟ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರಲು ಅವಕಾಶವಿರುವುದಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೀಡಿರುವ ಸೂಚನೆ ಮತ್ತು ಮಾರ್ಗಸೂಚಿಗಳನ್ನು ಪ್ರತಿ ಪರೀಕ್ಷಾರ್ಥಿ ಅಭ್ಯರ್ಥಿ ಹಾಗೂ ಪರೀಕ್ಷಾ ಕರ್ತವ್ಯದಲ್ಲಿರುವ ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಪಾಲಿಸಬೇಕೆಂದು ಅವರು ಹೇಳಿದರು. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗೋಡೆಗಡಿಯಾರ ಹಾಗೂ ಸಿಸಿ ಟಿವಿ ಕಡ್ಡಾಯವಾಗಿ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರೀಕ್ಷೆಯ ವೇಳೆ ವಿದ್ಯುತ್ ವ್ಯತ್ಯಯವಾಗದಂತೆ ಜೆಸ್ಕಾಂ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಪರೀಕ್ಷೆಯ ಸಂದರ್ಭದಲ್ಲಿ ಅಧಿಕಾರಿಗಳು ಸಮಯಪಾಲನೆ ಮಾಡಬೇಕು. ಪರೀಕ್ಷೆ ನಡೆಯುವ ಕಾರ್ಯವನ್ನು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಿಸಿ ಪರೀಕ್ಷಾ ಪ್ರಾಧಿಕಾರಕ್ಕೆ ರವಾನಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಅವರು ಮಾತನಾಡಿ, ಪರೀಕ್ಷೆ ಕೊಠಡಿಗಳಲ್ಲಿ ಅಭ್ಯರ್ಥಿಗಳು ಹಾಗೂ ಮೇಲ್ವಿಚಾರಕರನ್ನು ಹೊರತುಪಡಿಸಿ ಯಾರೂ ಪರೀಕ್ಷಾ ಕೊಠಡಿಗಳಿಗೆ ಪ್ರವೇಶಿಸುವಂತಿಲ್ಲ. ಒಂದು ವೇಳೆ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಅಭ್ಯರ್ಥಿಯ ಬಗ್ಗೆ ಅನುಮಾನ ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಅಥವಾ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಡಿವೈಎಸ್ಪಿ ಪಿ.ಮುರಳೀಧರ, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್ ಸೇರಿದಂತೆ ಪೊಲೀಸ್ ಪೇದೆ ನೇಮಕಾತಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
PublicNext
01/08/2026 12:27 pm