ತುಮಕೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ತುಮಕೂರಿನ ಪಾವಗಡ ಯೋಜನೆಯ ಸಿ.ಕೆ.ಪುರ ಕಾರ್ಯಕ್ಷೇತ್ರದ ಜ್ಞಾನ ವಾಹಿನಿ ಪ್ರೌಢಶಾಲೆಯಲ್ಲಿ 'ಸ್ವಾಸ್ಥ್ಯ ಸಂಕಲ್ಪ' ಜಾಗೃತಿ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಂಪನ್ಮೂಲ ವ್ಯಕ್ತಿಯಾಗಿದ್ದ ರಾಮಕೃಷ್ಣ ಅವರು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು. ನಿಕೋಟಿನ್, ಆಫೀಮ್, ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳ ಸೇವನೆಯಿಂದ ದೇಹ ಮತ್ತು ನರಮಂಡಲದ ಮೇಲೆ ಗಂಭೀರ ಪರಿಣಾಮ ಉಂಟಾಗುವುದರ ಜೊತೆಗೆ ಕ್ಯಾನ್ಸರ್ ಸೇರಿದಂತೆ ಹಲವು ಮಾರಕ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಯುವ ಪೀಳಿಗೆ ಯಾವುದೇ ರೀತಿಯ ಮಾದಕ ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕ ನವೀನ್ ಅವರು ಇಲಾಖೆಯ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ಷೇತ್ರದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ರೋಜಾ, ಶಾಲೆಯ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸುಮಾರು 90 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಆರೋಗ್ಯ ಹಾಗೂ ಮಾದಕ ವ್ಯಸನ ತಡೆ ಕುರಿತು ಉಪಯುಕ್ತ ಮಾಹಿತಿ ಪಡೆದುಕೊಂಡರು.
PublicNext
01/08/2026 01:59 pm
LOADING...