ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯವು ಪ್ರಸ್ತುತ ಭರ್ತಿಯಾಗುವ ಹಂತ ತಲುಪಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತದ ಕಬಿನಿ ಜಲಾಶಯ ವಿಭಾಗವು ಪ್ರವಾಹ ಮುನ್ನೆಚ್ಚರಿಕೆ ಸೂಚನೆಯನ್ನು ಹೊರಡಿಸಿದೆ.
ದಿನಾಂಕ 01-08-2026ರಂದು ಕಬಿನಿ ಜಲಾಶಯಕ್ಕೆ 15,500 ಕ್ಯೂಸೆಕ್ ಒಳಹರಿವು ಬರುತ್ತಿದ್ದು, ಜಲಾಶಯದಿಂದ 8,000 ರಿಂದ 10,000 ಕ್ಯೂಸೆಕ್ ನೀರನ್ನು ಹೊರಬಿಡುವ ಸಂಭವವಿದೆ. ಈ ಪ್ರಮಾಣವು ಯಾವುದೇ ಕ್ಷಣದಲ್ಲಾದರೂ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಕಾರ್ಯಪಾಲಕ ಅಭಿಯಂತರರು, ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಯ ಕುರಿತು ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕೋರಿದ್ದಾರೆ.
ಜಲಾಶಯದಿಂದ ನೀರು ಬಿಡುಗಡೆಯಾಗುವುದರಿಂದ ನದಿಯ ನೀರಿನ ಮಟ್ಟ ಏರುವ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಅಪಾಯವಿದೆ. ಆದ್ದರಿಂದ ಸಾರ್ವಜನಿಕರು ಆತಂಕಕ್ಕೊಳಗಾಗದೆ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
Kshetra Samachara
01/08/2026 06:00 pm
LOADING...