ಕೊಡಗು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವತಿಯಿಂದ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ವಲಯದ ಚಿಕ್ಕಪೇಟೆಯ ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯಲ್ಲಿ 'ಸ್ವಾಸ್ಥ್ಯ ಸಂಕಲ್ಪ' ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಶಿಕ್ಷಕ ರಾಜೇಗೌಡ ಉದ್ಘಾಟಿಸಿದರು. ಚಿಕ್ಕಪೇಟೆ ಒಕ್ಕೂಟದ ಅಧ್ಯಕ್ಷೆ ಅಂಬಿಕಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ರಾಜೇಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅತಿಯಾದ ಮೊಬೈಲ್ ಬಳಕೆಯೂ ಒಂದು ದುಶ್ಚಟವಾಗಿದ್ದು, ಪ್ರೌಢಾವಸ್ಥೆಯಲ್ಲಿ ಮನಸ್ಸು ಚಂಚಲವಾಗಿರುವುದರಿಂದ ಸ್ವನಿಗ್ರಹದ ಮೂಲಕ ಉತ್ತಮ ಅಭ್ಯಾಸಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬಿ.ಸಿ. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲೋಕೇಶ್ ಎಚ್.ಡಿ. ಮಾತನಾಡಿ, ತಂಬಾಕು, ಸಿಗರೇಟ್, ಮದ್ಯಪಾನ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಮತ್ತು ಸಾಮಾಜಿಕ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಜೊತೆಗೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ನಿದ್ರಾಹೀನತೆ, ಏಕಾಗ್ರತೆ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳು ಎದುರಾಗುತ್ತವೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿ, ಆರೋಗ್ಯಕರ ಜೀವನಶೈಲಿ ರೂಢಿಸಿಕೊಂಡು ಉತ್ತಮ ಪ್ರಜೆಗಳಾಗಿ ಸಮಾಜದಲ್ಲಿ ಗೌರವ ಗಳಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಯೋಜನೆಯ ಮೇಲ್ವಿಚಾರಕ ದನೇಶ್ ಕುಮಾರ್, ಶಾಲೆಯ ಶಿಕ್ಷಕರಾದ ಸೋಮಶೇಖರ್, ಸಂತೋಷ್, ಎಚ್.ಎಸ್. ಸೀತಾ, ಎನ್.ಎಸ್. ಪುಷ್ಪ, ಎಚ್. ಕವಿತಾ, ಸೇವಾಪ್ರತಿನಿಧಿ ಪದ್ಮಲತಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kshetra Samachara
01/08/2026 10:13 pm
LOADING...