ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶಾಂತಿ ರ‍್ಯಾಲಿಯ ವೇಳೆ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಲ್ಲಿ ಪೊಲೀಸ್ ಸಿಬ್ಬಂದಿ ಸೇರಿ 9 ಮಂದಿ ಸಾವನ್ನಪ್ಪಿದ್ದು, ಕನಿಷ್ಠ 18 ಮಂದಿ ಗಾಯಗೊಂಡಿದ್ದಾರೆ.
ಸ್ವಾತ್ ಪ್ರದೇಶದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಹದಗೆಟ್ಟಿರುವ ಭದ್ರತಾ ಪರಿಸ್ಥಿತಿಯನ್ನು ಖಂಡಿಸಿ ಹಾಗೂ ಶಾಂತಿ ಸ್ಥಾಪನೆಗೆ ಒತ್ತಾಯಿಸಿ ಸ್ಥಳೀಯ ಬುಡಕಟ್ಟು ಸಂಘಟನೆ ಸ್ವಾತ್ ಅಮನ್ ಜಿರ್ಗಾ ಶಾಂತಿ ರ‍್ಯಾಲಿಯನ್ನು ಆಯೋಜಿಸಿತ್ತು. ಪ್ರತಿಭಟನಾಕಾರರು ಶಾಂತಿ ಕಾಪಾಡುವಂತೆ ಘೋಷಣೆಗಳನ್ನು ಕೂಗುತ್ತಾ ಫಲಕಗಳನ್ನು ಹಿಡಿದು ಮೆರವಣಿಗೆ ನಡೆಸುತ್ತಿದ್ದ ವೇಳೆ ಏಕಾಏಕಿ ಭಾರೀ ಸ್ಫೋಟ ಸಂಭವಿಸಿದೆ.
ಸ್ಫೋಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇದು ಆತ್ಮಾಹುತಿ ದಾಳಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದರೂ, ಪಾಕಿಸ್ತಾನ ಅಧಿಕಾರಿಗಳು ಇದನ್ನು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ.
ಸ್ಫೋಟದಲ್ಲಿ ಗಾಯಗೊಂಡವರನ್ನು ತಕ್ಷಣ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಘಟನೆಯ ಬಳಿಕ ಪೊಲೀಸರು ಹಾಗೂ ಇತರ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದು ತನಿಖೆ ಆರಂಭಿಸಿವೆ. ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಸಂಘಟನೆ ಹೊತ್ತಿಕೊಂಡಿಲ್ಲ.
PublicNext
02/08/2026 10:09 pm
LOADING...