ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲುಗಡೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕೆಳಗೂರು ಗ್ರಾಮದಲ್ಲಿ ಪ್ರತಿನಿತ್ಯ ಸುತ್ತಮುತ್ತಲ ಹತ್ತಾರು ಹಳ್ಳಿಗಳಿಂದ ಶಾಲಾ-ಕಾಲೇಜುಗಳಿಗೆ ತೆರಳುವ ನೂರಾರು ವಿದ್ಯಾರ್ಥಿಗಳು ಬಸ್ ಸೌಕರ್ಯವಿಲ್ಲದೆ ಪರದಾಡುತ್ತಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಬಸ್ ನಿಲುಗಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಕಳೆದ ಒಂದು ತಿಂಗಳ ಹಿಂದೆಯೇ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದರು. ಹೀಗಿದ್ದರೂ ಸಹ ಕೆಎಸ್‌ಆರ್‌ಟಿಸಿ ಚಾಲಕರು ಬಸ್‌ಗಳನ್ನು ಕೆಳಗೂರು ಗ್ರಾಮದಲ್ಲಿ ನಿಲ್ಲಿಸದೆ ನಿರ್ಲಕ್ಷ್ಯ ವಹಿಸುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಮೇಲಾಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ರೋಸಿಹೋದ ವಿದ್ಯಾರ್ಥಿಗಳು ಅನಿವಾರ್ಯವಾಗಿ ರಸ್ತೆಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ.
ತಮ್ಮ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಕೆಳಗೂರು ಗ್ರಾಮದಲ್ಲಿ ತಕ್ಷಣವೇ ಬಸ್ ನಿಲುಗಡೆ ಮಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ಈ ಕೂಡಲೇ ಸಮಸ್ಯೆಯನ್ನು ಬಗೆಹರಿಸದಿದ್ದರೆ ಮುಂಬರುವ ದಿನಗಳಲ್ಲಿ ಇನ್ನಷ್ಟು ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ರಸ್ತೆ ತಡೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.
PublicNext
03/08/2026 12:55 pm
LOADING...