ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಎರಡನೇ ಬಾರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಯಳಂದೂರು ತಾಲೂಕಿನ ಉಪ್ಪಿನಮೋಳೆ ಗ್ರಾಮದವರಾದ ಸಿ. ಪುಟ್ಟರಂಗಶೆಟ್ಟಿ ಅವರು 1973ರಲ್ಲಿ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನಕ್ಕೆ ಪ್ರವೇಶಿಸಿದರು.
1982-83 ರಿಂದ 5 ವರ್ಷಗಳ ಕಾಲ ಗೌಡಹಳ್ಳಿ ಮಂಡಲ ಪಂಚಾಯಿತಿಯ ಉಪ ಪ್ರಧಾನರಾಗಿ ಹಾಗೂ ನಂತರ ಪ್ರಧಾನರಾಗಿ ಜನಸೇವೆ ಸಲ್ಲಿಸಿದರು.1992-93ರಲ್ಲಿ ಮೈಸೂರು ಹಾಗೂ ಚಾ. ನಗರ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದರು. 1998 ರಿಂದ 2003ರವರೆಗೆ ಯಳಂದೂರು ಟಿಎಪಿಸಿಎಂಎಸ್ ಅಧ್ಯಕ್ಷರಾಗಿದ್ದರು.
2005ರಲ್ಲಿ ಜಿಪಂ (ಯಳಂದೂರು ಕಸಬಾ ಕ್ಷೇತ್ರ) ಸದಸ್ಯರಾಗಿ ಆಯ್ಕೆಯಾಗಿ 2007-08ರಲ್ಲಿ ಜಿಪಂ ಉಪಾಧ್ಯಕ್ಷರಾಗಿದ್ದರು.2008ರಲ್ಲಿ ಕಾಂಗ್ರೆಸ್ ಪಕ್ಷದಿಂದ ಮೊದಲ ಬಾರಿಗೆ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಶಾಸಕರಾಗಿ ಆಯ್ಕೆಯಾದರು.
2013 ಹಾಗೂ 2018ರಲ್ಲಿಯೂ ಶಾಸಕರಾಗಿ ಆಯ್ಕೆಯಾದರು. ಶಾಸಕರಾಗಿದ್ದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು.
2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ನೇಮಕಗೊಂಡು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದರು.
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಸತತವಾಗಿ 4ನೇ ಬಾರಿ ಶಾಸಕರಾಗಿ ಆಯ್ಕೆಯಾದರು. ಮೊದಲ ಅವಧಿಯಲ್ಲಿ ಕಡೇ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿತು. ಸಚಿವ ಸ್ಥಾನದಿಂದ ವಂಚಿತರಾದ ಇವರಿಗೆ ಎಂಎಸ್ಐಎಲ್ ನಿಗಮದ ಅಧ್ಯಕ್ಷ ಸ್ಥಾನ ಒಲಿದು ಬಂತು. ಹಿಂದುಳಿದ ಉಪ್ಪಾರ ಜನಾಂಗದ ಏಕೈಕ ಶಾಸಕರಾಗಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆತಿದೆ. ಅಲ್ಲದೇ ಸಿ. ಪುಟ್ಟರಂಗಶೆಟ್ಟಿ ಸೇರಿದಂತೆ 20 ಶಾಸಕರು ನೂತನ ಸಚಿವರಾಗಿ ಆಯ್ಕೆಯಾಗಿದ್ದು, ನೂತನ ಸಂಪುಟ ಸೇರಿಕೊಳ್ಳಲಿದ್ದಾರೆ.
PublicNext
03/08/2026 04:20 pm