ಮೈಸೂರು: ರಾಜ್ಯದಲ್ಲಿ ಲಂಚ ಪಡೆಯುವಾಗ ಸಿಕ್ಕಿಬೀಳುವ ಭ್ರಷ್ಟ ಅಧಿಕಾರಿಗಳ ಪಟ್ಟಿಗೆ ಮತ್ತೊಬ್ಬರು ಸೇರ್ಪಡೆಯಾಗಿದ್ದಾರೆ. ಜಮೀನು ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಹುಣಸೂರು ಉಪ ವಿಭಾಗಾಧಿಕಾರಿ (AC) ಕಾವ್ಯಾರಾಣಿ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಮೀನು ಖಾತೆ ಮಾಡಿಕೊಡುವ ನೆಪದಲ್ಲಿ 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾವ್ಯಾರಾಣಿ ಅವರು, ಮುಂಗಡವಾಗಿ 5 ಲಕ್ಷ ರೂಪಾಯಿ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಹೆಚ್.ಡಿ. ಕೋಟೆ ತಾಲೂಕಿನ ಜಮೀನಿನ ಖಾತೆ ವರ್ಗಾವಣೆ ಮಾಡಿಕೊಡಲು ಕಾವ್ಯಾರಾಣಿ ಅವರು ದೂರುದಾರರ ಬಳಿ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ನೊಂದ ದೂರುದಾರರು ಮೈಸೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ, ಇಂದು ಕಾವ್ಯಾರಾಣಿ ಅವರು ತಮ್ಮ ಮನೆಯಲ್ಲಿ 5 ಲಕ್ಷ ರೂ. ಹಣ ಪಡೆಯುತ್ತಿದ್ದ ವೇಳೆಯಲ್ಲೇ ದಾಳಿ ನಡೆಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸ್ಥಳದಲ್ಲೇ ಕಾವ್ಯಾರಾಣಿ ಅವರನ್ನು ವಶಕ್ಕೆ ಪಡೆದಿದ್ದು, ಅವರಿಂದ 5 ಲಕ್ಷ ರೂ. ಲಂಚದ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಜನರ ಕೆಲಸ ಮಾಡಲು ಕಾಸು ಕೇಳುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. "ಸರ್ಕಾರಿ ಸೇವೆ ಎನ್ನುವುದು ಸೇವೆಯಾಗಬೇಕು, ದಂಧೆಯಾಗಬಾರದು" ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
PublicNext
03/08/2026 08:13 pm
LOADING...