ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಮಧ್ಯಪ್ರವೇಶ: ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ: ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೂರವಾಣಿ ಕರೆ ಹಾಗೂ ಬೆಳಗಿನ ಭೇಟಿಯ ಬಳಿಕ ತಮ್ಮ ರಾಜೀನಾಮೆ ನಿರ್ಧಾರವನ್ನು ಹಿಂಪಡೆದು ಪಕ್ಷದಲ್ಲೇ ಮುಂದುವರಿಯುವುದಾಗಿ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬೇಳೂರು, “ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ನಿರೀಕ್ಷೆಯಲ್ಲಿದ್ದ ನನಗೂ, ನನ್ನ ಬೆಂಬಲಿಗರು ಹಾಗೂ ಕಾರ್ಯಕರ್ತರಿಗೂ ತೀವ್ರ ನಿರಾಸೆಯಾಗಿದೆ. ಇದರಿಂದ ಮನನೊಂದು ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ವಿಷಯ ತಿಳಿದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದಾಗಿ ಕರೆ ಮಾಡಿ ಯಾವುದೇ ಅವಸರದ ತೀರ್ಮಾನ ಕೈಗೊಳ್ಳಬಾರದು ಎಂದು ತಿಳಿಸಿ ಬೆಳಿಗ್ಗೆ ಭೇಟಿಗೆ ಆಹ್ವಾನಿಸಿದರು. ಅವರೊಂದಿಗಿನ ಮಾತುಕತೆಯ ನಂತರ ಪಕ್ಷದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಂಡಿದ್ದೇನೆ,” ಎಂದು ಹೇಳಿದರು.

ತಾವು ಯಾವುದೇ ಅಧಿಕಾರ ಅಥವಾ ಭರವಸೆಯನ್ನು ಬಯಸಿ ಈ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪಕ್ಷದಲ್ಲಿ ಯಾವುದೇ ಗೊಂದಲ ಉಂಟಾಗಬಾರದು ಎಂಬ ಕಾರಣಕ್ಕೆ ಹಾಗೂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮೇಲಿನ ಗೌರವದಿಂದ ಕಾಂಗ್ರೆಸ್‌ನಲ್ಲೇ ಉಳಿಯಲು ನಿರ್ಧರಿಸಿದ್ದೇನೆ ಎಂದರು.

ಇದೇ ವೇಳೆ ತಮ್ಮ ಬೆಂಬಲಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಸ್ಥಳೀಯ ಬ್ಲಾಕ್ ಕಾಂಗ್ರೆಸ್ ನಾಯಕರು ಹಾಗೂ ಅಭಿಮಾನಿಗಳು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಮನವಿ ಮಾಡಿದರು.

ಕಳೆದ ಮೂರು ವರ್ಷಗಳಲ್ಲಿ ಅಥವಾ ತಮ್ಮ ರಾಜಕೀಯ ಜೀವನದಲ್ಲಿ ಯಾವುದೇ ಶಿಸ್ತು ಉಲ್ಲಂಘನೆ ಅಥವಾ ಭಿನ್ನಮತದ ಚಟುವಟಿಕೆಯಲ್ಲಿ ತೊಡಗಿಲ್ಲ ಎಂದು ಹೇಳಿದ ಶಾಸಕರು, ಹೈಕಮಾಂಡ್ ಅಥವಾ ಯಾವುದೇ ನಾಯಕರ ವಿರುದ್ಧ ತಮಗೆ ಯಾವುದೇ ದೂರು ಇಲ್ಲ ಎಂದರು. ಸಚಿವ ಸ್ಥಾನ ಸಂಬಂಧಿತ ಪ್ರಕ್ರಿಯೆ ಮುಗಿದಿದ್ದು, ಮುಂಬರುವ ಚುನಾವಣೆಗಳಲ್ಲಿ ಪಕ್ಷವನ್ನು ಬಲಪಡಿಸಲು ಹಾಗೂ ಮುಖ್ಯಮಂತ್ರಿಗಳ ಕೈ ಬಲಪಡಿಸಲು ಶಾಸಕರಾಗಿ ನಿಷ್ಠೆಯಿಂದ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

Edited By : PublicNext Desk
Kshetra Samachara

Kshetra Samachara

04/08/2026 12:01 pm

Cinque Terre

4.28 K

Cinque Terre

0

ಸಂಬಂಧಿತ ಸುದ್ದಿ