ಶಿರಹಟ್ಟಿ: ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಹಾದುಹೋಗಿರುವ ಮುಖ್ಯ ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ನೀರು ಬಸ್ ನಿಲ್ದಾಣದ ತುಂಬೆಲ್ಲ ಹರಿಯುತ್ತಿದೆ. ಸಾರ್ವಜನಿಕರು ಹಾಗೂ ಪ್ರಯಾಣಿಕರು ಅದೇ ಕೆಸರು ನೀರನ್ನು ದಾಟುತ್ತಾ ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ವಯೋವೃದ್ಧರು ಮತ್ತು ಪುಟ್ಟ ಮಕ್ಕಳ ಪರಿಸ್ಥಿತಿಯಂತೂ ಹೇಳತೀರದಾಗಿದೆ.
ಇನ್ನೊಂದೆಡೆ ಬರಗಾಲದ ಛಾಯೆ ಆವರಿಸಿದ್ದು, ಕುಡಿಯಲು ನೀರಿಲ್ಲದೆ ಜನರು ಪರದಾಡುವ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಶಿರಹಟ್ಟಿ ಬಸ್ ನಿಲ್ದಾಣದಲ್ಲಿ ಸಾವಿರಾರು ಲೀಟರ್ ನೀರು ರಸ್ತೆಪಾಲು ಆಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪಟ್ಟಣದಲ್ಲಿ ಕುಡಿಯುವ ನೀರು ಪೂರೈಕೆ ಮಾಡಿದಾಗಲೆಲ್ಲಾ ಈ ರೀತಿ ಪೈಪ್‌ಲೈನ್ ಒಡೆದು ನೀರು ಪೋಲಾಗುತ್ತಿರುತ್ತದೆ. ಆದರೂ ಅಧಿಕಾರಿಗಳು ಮಾತ್ರ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ ಎನ್ನುವುದು ಸ್ಥಳೀಯರ ಆರೋಪ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಒಡೆದ ಪೈಪ್‌ಲೈನ್ ಸರಿಪಡಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಗೌರೀಶ ನಾಗಶೆಟ್ಟಿ, ಪಬ್ಲಿಕ್ ನೆಕ್ಸ್ಟ್, ಶಿರಹಟ್ಟಿ
PublicNext
04/08/2026 02:26 pm
LOADING...