ಮೊಳಕಾಲ್ಮೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ, ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಸ್ತೆ ತಡೆದು, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಹಿರಿತನದ ಆಧಾರದ ಮೇಲೆ ಎನ್.ವೈ. ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಸರ್ಕಾರ ಹಾಗೂ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಎನ್.ವೈ. ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯ ವೇಳೆ ಕೆಲವರು ಕೈಯಲ್ಲಿ ವಿಷದ ಬಾಟಲಿ ಹಿಡಿದು ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರೆ, ಇನ್ನು ಕೆಲವರು ಪೆಟ್ರೋಲ್ ಹಿಡಿದು ಪ್ರತಿಭಟನೆ ನಡೆಸಿ, ಹಿರಿಯ ಶಾಸಕರಿಗೆ ಆದ್ಯತೆ ನೀಡಿ ತಕ್ಷಣ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.
PublicNext
04/08/2026 04:12 pm
LOADING...