ಗದಗ : ಲಕ್ಷ್ಮೇಶ್ವರ ತಾಲೂಕು ಕೇಂದ್ರವಾದ ಲಕ್ಷ್ಮೇಶ್ವರ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಪುರಸಭೆಯ ನಿರ್ಲಕ್ಷ್ಯದ ಪರಿಣಾಮ ಒಂದೇ ವಾರದಲ್ಲಿ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ನಡೆಸಿರುವ ಘಟನೆಗಳು ನಡೆದಿದ್ದು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಪಟ್ಟಣದ ವಾರ್ಡ್ ನಂ. 5ರ ಮಕಾನ ಓಣಿಯಲ್ಲಿ ಎರಡೂವರೆ ವರ್ಷದ ರಾಹಾ ಗಾಡಿವಾಲೆ ಎಂಬ ಮಗು ಅಂಗಡಿಗೆ ತೆರಳುತ್ತಿದ್ದ ವೇಳೆ ಏಕಾಏಕಿ ಬೀದಿ ನಾಯಿ ದಾಳಿ ನಡೆಸಿ ತಲೆಗೆ ಕಚ್ಚಿದೆ. ಸ್ಥಳೀಯರು ತಕ್ಷಣ ಧಾವಿಸಿ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಮ್ಸ್ (GIMS) ಆಸ್ಪತ್ರೆಗೆ ರವಾನಿಸಲಾಗಿದೆ.
ಇದಕ್ಕೂ ಕೆಲ ದಿನಗಳ ಹಿಂದೆ ಪಟ್ಟಣದ ಮತ್ತೊಂದು ಪ್ರದೇಶದಲ್ಲಿಯೂ ಬೀದಿ ನಾಯಿಗಳ ದಾಳಿಗೆ ಮತ್ತೊಂದು ಮಗು ಗಾಯಗೊಂಡಿತ್ತು. ನಿರಂತರವಾಗಿ ಇಂತಹ ಘಟನೆಗಳು ಮರುಕಳಿಸುತ್ತಿದ್ದರೂ ಪುರಸಭೆ ಅಧಿಕಾರಿಗಳು ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.
ಪಟ್ಟಣದ ವಿವಿಧ ಬಡಾವಣೆಗಳು, ಶಾಲೆಗಳ ಸುತ್ತಮುತ್ತ, ಮಾರುಕಟ್ಟೆ ಪ್ರದೇಶ ಹಾಗೂ ಮುಖ್ಯ ರಸ್ತೆಗಳಲ್ಲಿ ಬೀದಿ ನಾಯಿಗಳ ಹಿಂಡುಗಳು ಸಂಚರಿಸುತ್ತಿರುವುದರಿಂದ ಮಕ್ಕಳು, ವೃದ್ಧರು ಹಾಗೂ ಮಹಿಳೆಯರು ಭಯದ ವಾತಾವರಣದಲ್ಲಿ ಓಡಾಡುವಂತಾಗಿದೆ. ಶಾಲೆಗೆ ಹೋಗುವ ಮಕ್ಕಳು ಮತ್ತು ಬೆಳಿಗ್ಗೆ-ಸಂಜೆ ವಾಯುವಿಹಾರಕ್ಕೆ ತೆರಳುವ ಸಾರ್ವಜನಿಕರು ಹೆಚ್ಚಿನ ಆತಂಕದಲ್ಲಿದ್ದಾರೆ.
ಈ ಕುರಿತು ಹಲವು ಬಾರಿ ಪುರಸಭೆಗೆ ಮನವಿ ಸಲ್ಲಿಸಿದ್ದರೂ ಸಮಸ್ಯೆ ನಿವಾರಣೆಗೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಬೀದಿ ನಾಯಿಗಳ ಸಂಖ್ಯೆಯನ್ನು ವೈಜ್ಞಾನಿಕವಾಗಿ ನಿಯಂತ್ರಿಸುವುದು, ಅಗತ್ಯ ಲಸಿಕೆ ಹಾಗೂ ಸಂತಾನೋತ್ಪತ್ತಿ ನಿಯಂತ್ರಣ ಕಾರ್ಯಕ್ರಮಗಳನ್ನು ತ್ವರಿತವಾಗಿ ಜಾರಿಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಇನ್ನಷ್ಟು ಅನಾಹುತಗಳು ಸಂಭವಿಸುವ ಮುನ್ನವೇ ಪುರಸಭೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಂಡು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.
PublicNext
05/08/2026 02:41 pm