ಹೊಸಪೇಟೆ : ವಿಜಯನಗರ ಜಿಲ್ಲೆಯಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟ ಹಿನ್ನೆಲೆಯಲ್ಲಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಕೊರತೆ ಎದುರಿಸುತ್ತಿರುವ ಜಿಲ್ಲೆಗಳ ಸಾಲಿನಲ್ಲಿ ವಿಜಯನಗರ ಮುಂಚೂಣಿಯಲ್ಲಿದೆ.
ರಾಜ್ಯಾದ್ಯಂತ ಮಾನ್ಸೂನ್ ವೈಫಲ್ಯದಿಂದ ಶೇಕಡಾ 41ರಷ್ಟು ಮಳೆ ಕೊರತೆಯಾಗಿದ್ದು, ಕೆಲವು ಕಡೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಿದೆ. ಮಳೆ ಕೊರತೆ ಕೃಷಿ ವಲಯದ ಮೇಲೆ ತೀವ್ರ ಪರಿಣಾಮ ಬೀರಿದ್ದು, ವಿಜಯನಗರ ಜಿಲ್ಲೆಯನ್ನು ಕೂಡಲೇ 'ಬರಪೀಡಿತ ಜಿಲ್ಲೆ' ಎಂದು ಘೋಷಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಬಿಜೆಪಿ ಕಾರ್ಯಾಲಯದಿಂದ ಆರಂಭವಾದ ಪ್ರತಿಭಟನಾ ರ್ಯಾಲಿಯು ತಾಲೂಕು ಕಚೇರಿಯವರೆಗೆ ಸಾಗಿ, ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿತು.
ಈ ವೇಳೆ ಮಾತನಾಡಿದ ಹೋರಾಟಗಾರರು, "ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಕೊರತೆಯಿಂದಾಗಿ 11 ತಾಲೂಕುಗಳು ಸುದೀರ್ಘ ಮಳೆ ರಹಿತ ವಾತಾವರಣವನ್ನು (Dry Spell) ಎದುರಿಸುತ್ತಿವೆ. ಕೃಷಿ ಸಂಪೂರ್ಣವಾಗಿ ಮಳೆಯನ್ನೇ ಅವಲಂಬಿಸಿದ್ದು, ವಿಜಯನಗರ ಜಿಲ್ಲೆಯಲ್ಲಿ ಶೇಕಡಾ 40ಕ್ಕಿಂತ ಕಡಿಮೆ ಮಳೆಯಾಗಿದೆ. ಇದರಿಂದಾಗಿ ಬಿತ್ತನೆ ಮಾಡಿದ ಬೆಳೆಗಳು ಕಣ್ಣೆದುರೇ ಒಣಗಿ ಹೋಗಿದ್ದು, ರೈತರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ" ಎಂದು ಕಳವಳ ವ್ಯಕ್ತಪಡಿಸಿದರು
.ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ತೀವ್ರ ಅಭಾವ ಸೃಷ್ಟಿಯಾಗಿದ್ದು, ಕೆಲಸ ಹುಡುಕಿ ಕೂಲಿ ಕಾರ್ಮಿಕರು ವಲಸೆ ಹೋಗುತ್ತಿದ್ದಾರೆ. ಜಿಲ್ಲಾಧಿಕಾರಿಗಳ ನೇತೃತ್ವದ ತಂಡವು ಹೊಸಪೇಟೆ ಸೇರಿದಂತೆ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದ್ದರಿಂದ ತಕ್ಷಣವೇ ಸಂಕಷ್ಟದಲ್ಲಿರುವ ರೈತರಿಗೆ ಪ್ರತಿ ಎಕರೆಗೆ ಸೂಕ್ತ ಪರಿಹಾರ ಧನ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.
PublicNext
05/08/2026 04:00 pm
LOADING...