ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿ. ನಾಗೇಂದ್ರ ಅವರನ್ನು ಸಂಪುಟದಿಂದ ತಕ್ಷಣವೇ ಕೈಬಿಡಬೇಕು

"ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪ ಎದುರಿಸುತ್ತಿರುವ ಶಾಸಕ ಬಿ. ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಸರ್ಕಾರ ಕೂಡಲೇ ಅವರನ್ನು ಸಂಪುಟದಿಂದ ಕೈಬಿಡಬೇಕು" ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬರೋಬ್ಬರಿ 187 ಕೋಟಿ ರೂಪಾಯಿಗಳ ಬೃಹತ್ ಹಗರಣ ನಡೆದಿರುವುದು ಅಕ್ಷರಶಃ ಸತ್ಯ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ದಲಿತ, ಬಡವರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣವನ್ನು ಕಡ್ಲೆಪುರಿ ಹಂಚಿದಂತೆ ಮನಸೋಇಚ್ಛೆ ಕೊಳ್ಳೆಹೊಡೆಯಲಾಗಿದೆ" ಎಂದು ಗಂಭೀರ ಆರೋಪ ಮಾಡಿದರು.

"ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿರುವುದನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿಧಾನಸಭೆಯಲ್ಲಿ ಹಾಗೂ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಹೀಗಿದ್ದರೂ ಪ್ರಕರಣದ ಸಮಗ್ರ ತನಿಖೆ ಪೂರ್ಣಗೊಳ್ಳುವ ಮುನ್ನವೇ ನಾಗೇಂದ್ರ ಅವರನ್ನು ಅವಸರದಿಂದ ಸಂಪುಟಕ್ಕೆ ಸೇರಿಸಿಕೊಂಡಿರುವುದು ಯಾವ ನೈತಿಕತೆ?" ಎಂದು ಅವರು ಪ್ರಶ್ನಿಸಿದರು.

"ಇದೇ ಹಗರಣದ ಮಾನಸಿಕ ಒತ್ತಡ ತಾಳಲಾರದೆ ನಿಗಮದ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡು ಪ್ರಾಣ ತೆತ್ತಿದ್ದಾರೆ. ಅವರ ಕುಟುಂಬದ ಕಣ್ಣೀರು ಇಂದಿಗೂ ಆರಿಲ್ಲ. ಮೃತರ ಕುಟುಂಬಕ್ಕೆ ನ್ಯಾಯ ಸಿಗುವ ಮೊದಲೇ, ತನಿಖಾ ಪ್ರಕ್ರಿಯೆ ಚಾಲ್ತಿಯಲ್ಲಿರುವಾಗಲೇ ಆರೋಪದ ಸುಳಿಯಲ್ಲಿರುವ ವ್ಯಕ್ತಿಯನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿರುವುದು ರಾಜ್ಯದ ಜನತೆಗೆ ಮತ್ತು ನೊಂದ ಕುಟುಂಬಕ್ಕೆ ಎಸಗಿದ ದೊಡ್ಡ ದ್ರೋಹವಾಗಿದೆ."

Edited By :
PublicNext

PublicNext

05/08/2026 05:44 pm

Cinque Terre

7.02 K

Cinque Terre

0

ಸಂಬಂಧಿತ ಸುದ್ದಿ