ಬೆಳಗಾವಿ: ಬೆಳಗಾವಿ ತಾಲೂಕಿನ ಸುತಗಟ್ಟಿ ಗ್ರಾಮದ ಸಮೀಪ ಕಳೆದ ಹಲವು ದಿನಗಳಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.
ಚಿರತೆ ಸೆರೆಗೆ ಬಿದ್ದ ಹಿನ್ನೆಲೆಯಲ್ಲಿ ಸುತಗಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಸುತಗಟ್ಟಿ ಗ್ರಾಮ ಕಾಕತಿ ಅರಣ್ಯ ಪ್ರದೇಶದ ವ್ಯಾಪ್ತಿಗೆ ಸೇರಿದ್ದು, ಕಳೆದ ಕೆಲವು ದಿನಗಳಿಂದ ಗ್ರಾಮದ ಹೊರವಲಯ, ಹೊಲಗಳ ಸುತ್ತಮುತ್ತ ಹಾಗೂ ರಸ್ತೆಗಳಲ್ಲಿ ಚಿರತೆ ಓಡಾಡುತ್ತಿರುವುದು ಗ್ರಾಮಸ್ಥರ ಗಮನಕ್ಕೆ ಬಂದಿತ್ತು. ಬೆಳಗಿನ ಜಾವ ಹಾಗೂ ಸಂಜೆ ವೇಳೆಯಲ್ಲಿ ಬೈಕ್ ಸವಾರರು ಮತ್ತು ರೈತರಿಗೆ ಚಿರತೆ ಕಾಣಿಸಿಕೊಂಡಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು. ಮಕ್ಕಳು, ಮಹಿಳೆಯರು ಹಾಗೂ ರೈತರು ಒಂಟಿಯಾಗಿ ಹೊರ ಹೋಗಲು ಹೆದರುವ ಪರಿಸ್ಥಿತಿ ಉಂಟಾಗಿತ್ತು.
ಸ್ಥಳೀಯರು ಚಿರತೆಯ ದೃಶ್ಯಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೊಗಳು ವೈರಲ್ ಆಗುತ್ತಿದ್ದಂತೆಯೇ ಸಾರ್ವಜನಿಕರಲ್ಲಿ ಎಚ್ಚರಿಕೆ ಮೂಡಿದರೆ, ಮತ್ತೊಂದೆಡೆ ಅರಣ್ಯ ಇಲಾಖೆಯ ಗಮನಕ್ಕೂ ವಿಷಯ ತಲುಪಿತು. ಗ್ರಾಮಸ್ಥರು ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಚಿರತೆಯನ್ನು ಸೆರೆ ಹಿಡಿಯುವಂತೆ ಮನವಿ ಮಾಡಿದರು.
ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಚಿರತೆಯ ಹೆಜ್ಜೆ ಗುರುತುಗಳನ್ನು ಪತ್ತೆಹಚ್ಚುವ ಕಾರ್ಯ ಕೈಗೊಂಡರು. ಚಿರತೆಯ ಸಂಚಾರ ಮಾರ್ಗವನ್ನು ಗುರುತಿಸಿ ಅದರ ಚಲನವಲನವನ್ನು ನಿರಂತರವಾಗಿ ಪರಿಶೀಲಿಸಿದರು. ಬಳಿಕ ಚಿರತೆ ಓಡಾಡುತ್ತಿದ್ದ ಪ್ರದೇಶದಲ್ಲಿ ಸೂಕ್ತ ಸ್ಥಳವನ್ನು ಆಯ್ಕೆ ಮಾಡಿ ಬೋನು ಅಳವಡಿಸಿ ರಾತ್ರಿ ಹಗಲು ಕಣ್ಗಾವಲು ನಡೆಸಿದರು.
ಅರಣ್ಯ ಸಿಬ್ಬಂದಿಯ ಸೂಕ್ತ ಯೋಜನೆ ಹಾಗೂ ಕಾರ್ಯಾಚರಣೆಯ ಫಲವಾಗಿ ಬುಧವಾರ ಚಿರತೆ ಬೋನಿಗೆ ಬಿದ್ದಿದೆ. ಚಿರತೆ ಸುರಕ್ಷಿತವಾಗಿ ಸೆರೆಗೆ ಸಿಕ್ಕಿರುವುದರಿಂದ ಗ್ರಾಮಸ್ಥರಲ್ಲಿ ನೆಮ್ಮದಿ ಮೂಡಿದೆ. ಕಾರ್ಯಾಚರಣೆ ಯಶಸ್ವಿಯಾಗುತ್ತಿದ್ದಂತೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
06/08/2026 01:11 pm