ಚಿಕ್ಕಮಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ಅಕ್ರಮ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಎಸ್‌ಟಿ ಮೋರ್ಚಾ ಆಗ್ರಹಿಸಿದೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಎಸ್‌ಟಿ ಮೋರ್ಚಾ ಅಧ್ಯಕ್ಷ ನಂದೀಶ್ ಭ್ರಷ್ಟಾಚಾರದ ಆರೋಪ ಹೊತ್ತಿರುವ ವ್ಯಕ್ತಿಯನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ಈ ಕಾಂಗ್ರೆಸ್ ಸರ್ಕಾರದ ಭ್ರಷ್ಟ ನೀತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾಗಿದ್ದ ಬಿ. ನಾಗೇಂದ್ರ ಅವರ ಅವಧಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂಪಾಯಿಗಳ ಬೃಹತ್ ಹಗರಣ ನಡೆದಿದೆ. ಲೋಕಸಭೆ ಹಾಗೂ ತೆಲಂಗಾಣ ಚುನಾವಣೆಗಳಿಗೆ ಹಣ ಸಂಗ್ರಹಿಸುವ ಉದ್ದೇಶದಿಂದ ಸ್ವತಃ ಕಾಂಗ್ರೆಸ್ ಸರ್ಕಾರವೇ ಈ ಅಕ್ರಮ ನಡೆಸಿದ್ದು, ನಾಗೇಂದ್ರ ಅವರು ಕೇವಲ ಪಾತ್ರಧಾರಿಯಾಗಿದ್ದಾರೆ ಹಾಗೂ ಕಾಂಗ್ರೆಸ್ ಪಕ್ಷವೇ ಇದರ ಮೂಲ ಸೂತ್ರಧಾರಿಯಾಗಿದೆ. ಸಿಬಿಐ ತನಿಖೆಯ ದೋಷಾರೋಪ ಪಟ್ಟಿಯಲ್ಲಿಯೂ ಅವರ ತಪ್ಪಿತಸ್ಥಿಕೆ ಸಾಬೀತಾಗಿದ್ದರೂ, ಅವರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಲು ಹೊರಟಿರುವುದು ಖಂಡನೀಯ ಎಂದರು. ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡದಿದ್ದರೆ ಚಿಕ್ಕಮಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ನಂದೀಶ್ ಎಚ್ಚರಿಕೆ ನೀಡಿದ್ದಾರೆ.
PublicNext
06/08/2026 03:09 pm
LOADING...