ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭೀಷ್ಮ ಕೆರೆಗೆ ಉಪಲೋಕಾಯುಕ್ತ ಭೇಟಿ: ಚರಂಡಿ ನೀರು ತಡೆಗೆ ಕಟ್ಟುನಿಟ್ಟಿನ ಸೂಚನೆ

ಗದಗ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ. ಎನ್. ಪಣೀಂದ್ರ ಅವರು ಗದಗದ ಐತಿಹಾಸಿಕ ಭೀಷ್ಮ ಕೆರೆಗೆ ಭೇಟಿ ನೀಡಿ ಸ್ಥಳೀಯ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಕೆರೆಗೆ ಕಲುಷಿತ ಚರಂಡಿ ನೀರು ಸೇರುತ್ತಿರುವುದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನೀರು ಸೇರದಂತೆ ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳು ಕೇವಲ ಕರ್ತವ್ಯಕ್ಕಾಗಿ ಕೆಲಸ ಮಾಡದೆ, ಮನಸಾರೆ ಕಾರ್ಯನಿರ್ವಹಿಸಿ ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ ಉತ್ಸಾಹ ತೋರಬೇಕು ಎಂದು ಅವರು ಹೇಳಿದರು. ಇದೇ ವೇಳೆ ಭೀಷ್ಮ ಕೆರೆಯ ಜಾಗವನ್ನು ಸಂಪೂರ್ಣವಾಗಿ ಅಳತೆ ಮಾಡಿಸಿ ಗಡಿ ಗುರುತಿಸಬೇಕು ಹಾಗೂ ಕೆರೆಯ ನಿರ್ಬಂಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಅಕ್ರಮ ವಸತಿ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಸ್ಪಷ್ಟಪಡಿಸಿದರು.

ಇನ್ನು ಚರಂಡಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೂಡಲೇ ಎಸ್‌ಟಿಪಿ (STP -ತ್ಯಾಜ್ಯ ನೀರು ಸಂಸ್ಕರಣಾ ಘಟಕ) ಯೋಜನೆ ರೂಪಿಸಿ ಜಾರಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಈ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದ ಅವರು, ಕೆರೆಯ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯುವವರೆಗೂ ತನಿಖೆ ಮತ್ತು ಪರಿಶೀಲನೆ ಮುಂದುವರಿಯಲಿದೆ ಎಂದು ತಿಳಿಸಿದರು.

Edited By :
Kshetra Samachara

Kshetra Samachara

06/08/2026 03:50 pm

Cinque Terre

3.22 K

Cinque Terre

0