ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಣೇಶ ಹಬ್ಬಕ್ಕೆ ಬಿಗ್ ರೂಲ್ಸ್; POP ಮೂರ್ತಿ ವಿಸರ್ಜನೆಗೆ ಅವಕಾಶವೇ ಇಲ್ಲ - ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

ಬೆಂಗಳೂರು: ಸೆಪ್ಟೆಂಬರ್ 14ರಂದು ರಾಜ್ಯಾದ್ಯಂತ ಆಚರಿಸಲಿರುವ ಗಣೇಶ ಹಬ್ಬ ಹಿನ್ನೆಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಮತ್ತು ಜಲಮೂಲಗಳಲ್ಲಿ ವಿಸರ್ಜನೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ನಿರ್ದೇಶನ ನೀಡಿರುವ ಸಚಿವರು, ಪರಿಸರ ಸ್ನೇಹಿ, ಬಣ್ಣ ರಹಿತ ಮಣ್ಣಿನ ಗೌರಿ-ಗಣೇಶ ಮೂರ್ತಿಗಳ ಪೂಜೆ ಹಾಗೂ ವಿಸರ್ಜನೆಗೆ ಮಾತ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.

ಗಣೇಶೋತ್ಸವದ ಸಂದರ್ಭದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ PoP ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಾಟ ಮತ್ತು ಮಾರಾಟವನ್ನು ಈಗಿನಿಂದಲೇ ತಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಕಾರ್ಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರ ಪಡೆದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸುವಂತೆ ಸಚಿವರು ನಿರ್ದೇಶಿಸಿದ್ದಾರೆ.

PoP ಮೂರ್ತಿಗಳಲ್ಲಿ ಬಳಸುವ ಕ್ಯಾಲ್ಷಿಯಂ ಸಲ್ಫೇಟ್, ಜಿಪ್ಸಮ್, ಗಂಧಕ, ಮ್ಯಾಗ್ನೀಷಿಯಂ ಸೇರಿದಂತೆ ಹಲವು ರಾಸಾಯನಿಕಗಳ ಜೊತೆಗೆ ಪಾದರಸ, ಕ್ಯಾಡ್ಮಿಯಂ, ಸೀಸ ಮತ್ತು ಇತರ ಭಾರಲೋಹಗಳಿರುವ ಬಣ್ಣಗಳು ಜಲಮೂಲಗಳಿಗೆ ತೀವ್ರ ಹಾನಿ ಉಂಟುಮಾಡುತ್ತವೆ.

ಇಂತಹ ಮೂರ್ತಿಗಳನ್ನು ಕೆರೆ, ನದಿ, ಬಾವಿ ಹಾಗೂ ಇತರ ಜಲಮೂಲಗಳಲ್ಲಿ ವಿಸರ್ಜಿಸಿದರೆ ನೀರು ಕಲುಷಿತವಾಗುವುದರ ಜೊತೆಗೆ ಜನರ ಆರೋಗ್ಯ, ಜಾನುವಾರುಗಳು ಮತ್ತು ಜಲಚರಗಳ ಜೀವಕ್ಕೂ ಅಪಾಯ ಉಂಟಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

'ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ–1974'ರ ಕಲಂ 33(ಎ) ಅಡಿಯಲ್ಲಿ ರಾಜ್ಯದ ಯಾವುದೇ ಜಲಮೂಲಗಳಲ್ಲಿ PoP ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ. ಈ ಕುರಿತು 2023ರ ಸೆಪ್ಟೆಂಬರ್ 15ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಆ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಹೈಕೋರ್ಟ್ ಕೂಡ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಜಲಮೂಲಗಳ ಸಂರಕ್ಷಣೆ ಹಾಗೂ ಪರಿಸರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ ಬಿ. ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

Edited By :
PublicNext

PublicNext

06/08/2026 04:36 pm

Cinque Terre

16.71 K

Cinque Terre

0

ಸಂಬಂಧಿತ ಸುದ್ದಿ