ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳಗಾರು ಬಳಿ ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದಲ್ಲಿದ್ದ ಕೆರೆಗೆ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳೂರಿನಿಂದ ಶಿವಮೊಗ್ಗ ಕಡೆಗೆ ಪ್ರಯಾಣಿಸುತ್ತಿದ್ದ ಟಾಟಾ ನೆಕ್ಸಾನ್ ಕಾರು ಬಾಳಗಾರು ಕೆರೆ ಬಳಿ ತಲುಪುತ್ತಿದ್ದಂತೆಯೇ ಸುರಿಯುತ್ತಿದ್ದ ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆಯ ಎಡಭಾಗದಲ್ಲಿದ್ದ ಕೆರೆಗೆ ಕಾರು ಬಿದ್ದಿದ್ದು, ಕ್ಷಣಾರ್ಧದಲ್ಲೇ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಕಾರು ಕೆರೆಗೆ ಬೀಳುತ್ತಿದ್ದಂತೆ ಸಮಯಪ್ರಜ್ಞೆ ಮೆರೆದ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು, ಅದೃಷ್ಟವಶಾತ್ ಈಜಿಕೊಂಡು ಸುರಕ್ಷಿತವಾಗಿ ಹೊರಬಂದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳೀಯರ ನೆರವಿನಿಂದ ಕಾರನ್ನು ಕೆರೆಯಿಂದ ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗಿದೆ.
PublicNext
06/08/2026 07:08 pm
LOADING...