ಕೇರಳ: ಕೇರಳದ ತ್ರಿಶೂರ್ ಜಿಲ್ಲೆಯ ಕುನ್ನಂಕುಲಂ ಸಮೀಪದ ಪರಯಂಬಡಂನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಸುಮಾರು 24 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಒಂಬತ್ತು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಝಿಕ್ಕೋಡ್‌ನಿಂದ ತ್ರಿಶೂರ್ ಕಡೆಗೆ ತೆರಳುತ್ತಿದ್ದ ಖಾಸಗಿ 'ಲಿಮಿಟೆಡ್-ಸ್ಟಾಪ್' ಬಸ್ ಮಧ್ಯಾಹ್ನ ಸುಮಾರು 2:30ರ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ಮೊದಲು ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ವ್ಯಾನ್, ಆಟೋರಿಕ್ಷಾ ಹಾಗೂ ಮೋಟಾರ್‌ಸೈಕಲ್ ಸೇರಿದಂತೆ ಒಟ್ಟು ಐದು ವಾಹನಗಳಿಗೆ ಅಪ್ಪಳಿಸಿದೆ.
ಡಿಕ್ಕಿಯ ತೀವ್ರತೆಗೆ ಬಸ್ ವಸತಿ ಪ್ರದೇಶದ ಕಾಂಪೌಂಡ್ ಗೋಡೆಯನ್ನು ಒಡೆದು ಆವರಣದೊಳಗೆ ನುಗ್ಗಿ ನಿಂತಿದೆ. ಅಪಘಾತದಲ್ಲಿ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಮೃತರಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿ ರಿಯಾ ಫಾತಿಮಾ ಸೇರಿದ್ದು, ಮತ್ತೊಬ್ಬ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ.
ಅಪಘಾತದ ತಕ್ಷಣ ಸ್ಥಳೀಯರು, ತುರ್ತು ಸೇವಾ ಸಿಬ್ಬಂದಿ ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.
ಅಪಘಾತಕ್ಕೂ ಮುನ್ನ ಬಸ್ ಅತಿ ವೇಗದಲ್ಲಿ ಚಲಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದು, ಅಪಘಾತದ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
06/08/2026 08:36 pm