ಗದಗ : ಶಿಕ್ಷಕರು ಮಕ್ಕಳಿಗೆ ಉತ್ತಮ ಬದುಕು, ಉತ್ತಮ ಬುದ್ಧಿ ಹಾಗೂ ಜ್ಞಾನವನ್ನು ನೀಡುವ ಮಾರ್ಗದರ್ಶಕರಾಗಬೇಕು. ಪ್ರತಿಯೊಂದು ಮಗುವಿನ ಭವಿಷ್ಯವನ್ನು ರೂಪಿಸುವ ಶಕ್ತಿ ಶಿಕ್ಷಕರ ಕೈಯಲ್ಲಿದ್ದು, ಶಿಕ್ಷಕರು ನಿಜವಾದ ಗುರುಗಳು ಹಾಗೂ ಸಮಾಜದ ದೀಪಸ್ತಂಭಗಳಾಗಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿ ಕಾರ್ಯಕ್ರಮವನ್ನು ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸಲು ಎಲ್ಲರೂ ಒಗ್ಗಟ್ಟಿನಿಂದ ನಿರ್ಧರಿಸಿದ್ದೇವೆ. ಕಾರ್ಯಕ್ರಮದಲ್ಲಿ 800ಕ್ಕೂ ಹೆಚ್ಚು ಶಿಕ್ಷಕರು ಭಾಗವಹಿಸಿದ್ದು, ವಿವಿಧ ಪ್ರದೇಶಗಳಿಂದ ಖ್ಯಾತ ಶಿಕ್ಷಕರು ಆಗಮಿಸಿದ್ದರು. ಎಲ್ಲ ಶಿಕ್ಷಕರಿಗೂ ಆಹ್ವಾನ ನೀಡಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ ಎಂದರು.
ಶಿಕ್ಷಕರು ಎಲ್ಲೇ ಹೋದರೂ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ತಮ್ಮ ಗೌರವವನ್ನು ಕಾಪಾಡಿಕೊಳ್ಳಬೇಕು. ಸಾರ್ವಜನಿಕರ ಮುಂದೆ ಶಿಕ್ಷಕರಿಗೆ ತಕ್ಕ ರೀತಿಯಲ್ಲಿ ವರ್ತಿಸಬೇಕು. ತಮ್ಮ ನಡೆ-ನುಡಿಯ ಬಗ್ಗೆ ಯಾರೂ ಬೆರಳು ತೋರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಸಲಹೆ ನೀಡಿದರು.
ವಿಶೇಷವಾಗಿ ಗ್ರಾಮೀಣ ಭಾಗದ ಶಿಕ್ಷಕರು ಹೆಚ್ಚು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದು, ಅವರ ಸೇವೆ ಮತ್ತು ಶ್ರಮ ಶ್ಲಾಘನೀಯವಾಗಿದೆ. ಆದಾಗ್ಯೂ, ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿಗೆ ಇನ್ನಷ್ಟು ಚಿಂತನೆ ಹಾಗೂ ಪರಿಣಾಮಕಾರಿ ಕಾರ್ಯ ಅಗತ್ಯವಿದೆ. ಗ್ರಾಮೀಣ ಶಾಲೆಗಳನ್ನು ಮತ್ತಷ್ಟು ಉತ್ತಮಗೊಳಿಸಲು ಎಲ್ಲ ಶಿಕ್ಷಕರು ಕೈಜೋಡಿಸಬೇಕು ಎಂದು ಕರೆ ನೀಡಿದರು.
ನಿವೃತ್ತ ಶಿಕ್ಷಕರಿಗೆ ಗೌರವ ಅಗತ್ಯ
50–60 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಹಿರಿಯ ಶಿಕ್ಷಕರ ಸೇವೆಯನ್ನು ಸ್ಮರಿಸಬೇಕು. ಜೀವನಪೂರ್ತಿ ಶಿಕ್ಷಣಕ್ಕಾಗಿ ದುಡಿದ ನಿವೃತ್ತ ಶಿಕ್ಷಕರಿಗೆ ಗೌರವ ಹಾಗೂ ಸನ್ಮಾನ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ನಿವೃತ್ತರಾದ ಪ್ರತಿಯೊಬ್ಬ ಶಿಕ್ಷಕರಿಗೂ ಪಿಂಚಣಿ ಸೇರಿದಂತೆ ಸರ್ಕಾರದಿಂದ ದೊರೆಯಬೇಕಾದ ಎಲ್ಲ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳ ಶಿಕ್ಷಕರಿಗೂ ಸರ್ಕಾರಿ ಶಾಲೆಗಳ ಶಿಕ್ಷಕರಂತೆ ನ್ಯಾಯಯುತ ವೇತನ ಹಾಗೂ ಅಗತ್ಯ ಸೌಲಭ್ಯಗಳು ದೊರೆಯಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ಹೇಳಿದರು.
ಯುವಕರಿಗೆ ಉದ್ಯೋಗ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ
ಕೋವಿಡ್ ನಂತರ ಉದ್ಯೋಗದ ಪರಿಸ್ಥಿತಿ ಕಷ್ಟಕರವಾಗಿದ್ದು, ಅನೇಕ ಯುವಕರು ಹಲವು ವರ್ಷಗಳಿಂದ ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಶಾಸಕ ಚಂದ್ರು ಲಮಾಣಿ ಹೇಳಿದರು.
ಶಿಕ್ಷಣ ಕ್ಷೇತ್ರದ ಬಗ್ಗೆ ಹೆಮ್ಮೆ ಮೂಡಿಸುವಂತಹ ಕಾರ್ಯಗಳನ್ನು ಶಿಕ್ಷಕರು ಶ್ರದ್ಧೆಯಿಂದ ಹಾಗೂ ಆಶೋತ್ತರದಿಂದ ನಿರ್ವಹಿಸುತ್ತಿದ್ದಾರೆ. ಶಿಕ್ಷಕರ ದಿನಾಚರಣೆ ಕೇವಲ ಒಂದು ದಿನದ ಆಚರಣೆಯಾಗದೆ, ಶಿಕ್ಷಣದ ಮಹತ್ವವನ್ನು ಸದಾ ನೆನಪಿಸಿಕೊಳ್ಳುವ ಹಾಗೂ ಶಿಕ್ಷಕರ ಸೇವೆಯನ್ನು ಗೌರವಿಸುವ ದಿನವಾಗಬೇಕು. ಎಲ್ಲ ಶಿಕ್ಷಕರಿಗೂ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಎಂದು ಅವರು ತಿಳಿಸಿದರು.
Kshetra Samachara
05/09/2026 03:34 pm