ತುಮಕೂರು : ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳು ಕಡ್ಡಾಯವಾಗಿ ಭೇಟಿ ನೀಡಿ, ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜಾ ಬಿ.ವಿ. ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಾಸ್ಟೆಲ್‌ಗಳಿಗೆ ಒಬ್ಬ ನೋಡಲ್ ವೈದ್ಯಾಧಿಕಾರಿಯನ್ನು ನೇಮಿಸಿ, ಕಾಲಕಾಲಕ್ಕೆ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕು ಎಂದರು.
ಪಾವಗಡ ಹಾಗೂ ಶಿರಾ ತಾಲೂಕಿನಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಿದ್ದು, ಆಶಾ ಕಾರ್ಯಕರ್ತೆಯರ ಮೂಲಕ ಐ.ಇ.ಸಿ.ಗಳನ್ನು ಪ್ರದರ್ಶಿಸಬೇಕು ಹಾಗೂ ಆಡಿಟ್ ನಡೆಸಬೇಕು ಎಂದು ಸೂಚಿಸಿದರು. ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು. ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕು. ಆರೋಗ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗದಿತ ಸಮಯಕ್ಕೆ ಶಾಲಾ-ಕಾಲೇಜುಗಳಿಗೂ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಬೇಕು ಎಂದರು.
ಸಮುದಾಯ ಆರೋಗ್ಯ ಅಧಿಕಾರಿಗಳು ಕಡ್ಡಾಯವಾಗಿ ಲಸಿಕಾ ಅಭಿಯಾನದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಈ ವೇಳೆ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹೃದಯಾಘಾತದ ಸಂದರ್ಭದಲ್ಲಿ, ವ್ಯಕ್ತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಮಾಡಬೇಕಾದ ಪ್ರಥಮ ಚಿಕಿತ್ಸೆಯ ಬಗ್ಗೆ ಪ್ರಾತ್ಯಕ್ಷಿಕೆಗಳ ಮೂಲಕ ವಿವರಣೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಆಡಳಿತ) ಈಶ್ವರಪ್ಪ, ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಮೋಹನ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
Kshetra Samachara
09/09/2026 08:15 am