ಮಂಡ್ಯ: ಮೈಶುಗರ್ ಕಾರ್ಖಾನೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕಾರ್ಖಾನೆಯ ಬಾಯ್ಲರ್‌ಗೆ ಬಿದ್ದ ಪರಿಣಾಮ ಕೆ.ಶೆಟ್ಟಿಹಳ್ಳಿ ಗ್ರಾಮದ ಚರಣ್ ಕುಮಾರ್ (33) ಮೃತಪಟ್ಟಿದ್ದಾರೆ.
ಶ್ರೇಯ ಏಜೆನ್ಸಿಯಡಿ ಗುತ್ತಿಗೆ ಆಧಾರದಲ್ಲಿ ಕಳೆದ ಒಂದೂವರೆ ವರ್ಷದಿಂದ ಚರಣ್ ಕುಮಾರ್ ಮೈಶುಗರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸೆಪ್ಟೆಂಬರ್ 3ರಂದು ಕೆಲಸದ ವೇಳೆ ಬಾಯ್ಲರ್‌ಗೆ ಬಿದ್ದಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಚರಣ್ ಕುಮಾರ್ ಮೃತಪಟ್ಟಿದ್ದಾರೆ.
ಕಾರ್ಖಾನೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಲೇ ಈ ದುರ್ಘಟನೆ ಸಂಭವಿಸಿದೆ ಎಂದು ಮೃತ ಕಾರ್ಮಿಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿ, ಮೃತ ಕಾರ್ಮಿಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಕಾರ್ಮಿಕನ ಸಾವಿನಿಂದ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Kshetra Samachara
09/09/2026 03:08 pm