ಭಾಗ್ಯನಗರ : ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸುವಂತೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ಮೂರು ತಾಲ್ಲೂಕುಗಳ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಟಾಸ್ಕ್ ಫೋರ್ಸ್ ಸಭೆ ನಡೆಯಿತು.
ಸಭೆಯಲ್ಲಿ ಕ್ಷೇತ್ರದ ವಿವಿಧ ಭಾಗಗಳಲ್ಲಿ ಎದುರಾಗಿರುವ ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಕೃಷಿ, ಬೆಳೆ ನಷ್ಟ ಪರಿಹಾರ ಸೇರಿದಂತೆ ಹಲವು ಸಾರ್ವಜನಿಕ ಸಮಸ್ಯೆಗಳ ಕುರಿತು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ವೇಳೆ ಕೆಲವು ಸಮಸ್ಯೆಗಳ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದಾಗ, ಹಿಂದಿನ ವಿಚಾರಗಳನ್ನು ಪ್ರಸ್ತಾಪಿಸಿ ಸಮಜಾಯಿಷಿ ನೀಡಲು ಮುಂದಾದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, “ಸಮಸ್ಯೆಗಳ ಬಗ್ಗೆ ಕೇಳಿದಾಗ ಪುರಾಣ ಹೇಳುವುದನ್ನು ಬಿಟ್ಟು, ಪರಿಹಾರ ಹುಡುಕುವ ಪ್ರಯತ್ನ ಮಾಡಿ. ಸಮಸ್ಯೆ ಏಕೆ ಉಂಟಾಯಿತು ಎಂಬುದನ್ನು ಹೇಳುವುದಕ್ಕಿಂತ, ಅದನ್ನು ಹೇಗೆ ಬಗೆಹರಿಸಬೇಕು ಎಂಬುದರ ಬಗ್ಗೆ ಗಮನ ಹರಿಸಿ” ಎಂದು ಖಡಕ್ ಸೂಚನೆ ನೀಡಿದರು.
ಕ್ಷೇತ್ರದ ಮೂರು ತಾಲ್ಲೂಕುಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಿಗೆ ಅಗತ್ಯವಿರುವ ಮೇವು ಸಮರ್ಪಕವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ನಿಯಮಾನುಸಾರ ಪರಿಹಾರ ದೊರೆಯುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಪರಿಶೀಲಿಸಿ, ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ಶಾಸಕ ತಿಳಿಸಿದರು.
ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಅಧಿಕಾರಿಗಳ ಮೊದಲ ಆದ್ಯತೆಯಾಗಬೇಕು. ಕಾರಣಗಳನ್ನು ಹೇಳಿ ಸಮಸ್ಯೆಗಳನ್ನು ಮುಂದೂಡುವುದನ್ನು ಸಹಿಸುವುದಿಲ್ಲ ಎಂದು ಎಸ್.ಎನ್. ಸುಬ್ಬಾರೆಡ್ಡಿ ಎಚ್ಚರಿಕೆ ನೀಡಿದರು.
-ಚಿಕ್ಕತೇಕಹಳ್ಳಿ ಡಿ.ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ
PublicNext
09/09/2026 10:22 pm