ಶಿರಸಿ : ಅತಿಕ್ರಮಣ ಜಾಗದಲ್ಲಿರುವ ಮನೆಗಳ ನಂಬರ್‌ಗಳನ್ನು ರದ್ದುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಶಾಸಕ ಭೀಮಣ್ಣ ಟಿ. ನಾಯ್ಕ್ ಅವರು ಗುರುವಾರ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಗ್ರಾಮೀಣ ಭಾಗದ ಬಡ ಹಾಗೂ ಸಾಮಾನ್ಯ ಜನರು ಹಲವು ವರ್ಷಗಳಿಂದ ವಾಸಿಸುತ್ತಿರುವ ಮನೆಗಳ ನಂಬರ್ ರದ್ದು ಮಾಡುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದು, ಮೂಲಭೂತ ಸೌಕರ್ಯಗಳಿಂದ ವಂಚಿತರಾಗುವ ಆತಂಕ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರ ತಂದಿರುವ ಈ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಶಾಸಕರು ಸಚಿವರಲ್ಲಿ ವಿನಂತಿಸಿಕೊಂಡರು.
ಶಾಸಕರ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ ಅವರು, “ಮುಂಬರುವ ವಿಧಾನಸಭಾ ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಾಸಕರ ಸಭೆಯನ್ನು ಕರೆದು, ಈ ವಿಷಯದ ಕುರಿತು ಕೂಲಂಕಷವಾಗಿ ಚರ್ಚಿಸಲಾಗುವುದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಈ ಆದೇಶವನ್ನು ಹಿಂಪಡೆಯುವ ನಿಟ್ಟಿನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಉಪಸ್ಥಿತರಿದ್ದರು.
PublicNext
10/09/2026 08:20 pm
LOADING...