ಮಡಿಕೇರಿ : ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕೊಡಗು ಜಿಲ್ಲಾ ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದ ಪರಿಣಾಮ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.
ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದ ಬಳಿ ರಸ್ತೆ ತಡೆ ನಡೆಸಿದ ರೈತರು, ಜಿಲ್ಲಾಧಿಕಾರಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತಮ್ಮ ಸಮಸ್ಯೆಗಳನ್ನು ಆಲಿಸಬೇಕೆಂದು ಪಟ್ಟು ಹಿಡಿದರು. ಪರಿಣಾಮ ಮೈಸೂರು, ವೀರಾಜಪೇಟೆ ಹಾಗೂ ಮಂಗಳೂರು ರಸ್ತೆಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಹೋರಾಟ ಸಮಿತಿ ಸಂಚಾಲಕ ಸುರೇಶ್ ಚಕ್ರವರ್ತಿ ಮಾತನಾಡಿ, ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮಸಭೆ ನಡೆಸಿ ಕಸ್ತೂರಿ ರಂಗನ್ ವರದಿ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ಹೇಳಿದರು. ಕಸ್ತೂರಿ ರಂಗನ್ ವರದಿಯಿಂದ ಜಿಲ್ಲೆಯ 53 ಗ್ರಾಮಗಳು ಸೂಕ್ಷ್ಮ ಪರಿಸರ ವಲಯಕ್ಕೆ ಒಳಪಡಲಿವೆ. ಈ ಗ್ರಾಮಗಳೊಂದಿಗೆ ಬಫರ್ ಝೋನ್ ಸೇರ್ಪಡೆಯಾದರೆ ಜಿಲ್ಲೆಯ 295 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಸಿ ಮತ್ತು ಡಿ ಜಮೀನಿನಲ್ಲಿ ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬದುಕುತ್ತಿರುವ ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಮುಕ್ಕೋಡ್ಲು ಗ್ರಾಮದ ಕೃಷಿಕ ನಾಣಿಯಪ್ಪ ಅವರ ತೋಟದಲ್ಲಿದ್ದ ಕಾಫಿ ಹಾಗೂ ಏಲಕ್ಕಿ ಬೆಳೆಗಳನ್ನು ಅರಣ್ಯ ಇಲಾಖೆ ನಾಶಪಡಿಸಿದ ಪ್ರಕರಣದಲ್ಲೂ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಜಿ. ಸೋಮಶೇಖರ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಹಾಗೂ ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ ಸ್ಥಳಕ್ಕೆ ಆಗಮಿಸಿ ರೈತರ ಬೇಡಿಕೆಗಳನ್ನು ಆಲಿಸಿದರು.
ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಜಿಲ್ಲೆಯ ಜನರ ಭಾವನೆಗಳಿಗೆ ಅನುಗುಣವಾಗಿ ಸಕಾರಾತ್ಮಕವಾಗಿ ಸ್ಪಂದಿಸಿ ಸರ್ಕಾರಕ್ಕೆ ಮಾಹಿತಿ ಒದಗಿಸುವುದಾಗಿ ಜಿಲ್ಲಾಧಿಕಾರಿ ಸೋಮಶೇಖರ್ ಭರವಸೆ ನೀಡಿದರು. ಶಾಸಕ ಡಾ. ಮಂತರ್ ಗೌಡ ಅವರು ಸಿ ಮತ್ತು ಡಿ ಜಮೀನು ಸಮಸ್ಯೆ ಕುರಿತು ರಚಿಸಿರುವ ವಿಶೇಷ ತನಿಖಾ ಸಮಿತಿ ಸ್ಥಳೀಯ ಭಾವನೆಗಳನ್ನು ಪರಿಗಣಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿಸಿದರು.
Kshetra Samachara
12/09/2026 07:34 am