ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಸಂಪ್ರದಾಯ ಗೌರವದೊಂದಿಗೆ ಈ ಬಾರಿ ಅರ್ಥಪೂರ್ಣ ದಸರಾ ಉತ್ಸವ - ಡಿಸಿ ಶುಭ ಕಲ್ಯಾಣ್ ನಿರ್ದೇಶನ.

ತುಮಕೂರು: ನಗರದಲ್ಲಿ ದಸರಾ ಉತ್ಸವವನ್ನು ಎಲ್ಲರನ್ನೊಳಗೊಂಡಂತೆ ಜನಪರವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ದಸರಾ ಉತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದಸರಾ ಅಂಗವಾಗಿ ನಡೆಯಲಿರುವ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಸ್ಥಳ, ಸಮಯ, ವೇದಿಕೆ ನಿರ್ಮಾಣ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ, ರಸ್ತೆ ಸಂಚಾರ, ವಾಹನ ನಿಲುಗಡೆ, ಶೌಚಾಲಯ ಹಾಗೂ ತುರ್ತು ವೈದ್ಯಕೀಯ ಸೇವೆಗಳಿಗೆ ಪ್ರಥಮ ಆದ್ಯತೆ ನೀಡುವಂತೆ ನಿರ್ದೇಶನ ನೀಡಿದರು.

ಭದ್ರತೆ ಹಾಗೂ ಬರ ನಿರ್ವಹಣೆಗೆ ವಿಶೇಷ ಒತ್ತು:

ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿರುವ ಕಾರಣ ಕಾನೂನು ಮತ್ತು ಸುವ್ಯವಸ್ಥೆ, ಜನಸಂದಣಿ ನಿಯಂತ್ರಣ ಹಾಗೂ ಸಂಚಾರ ನಿರ್ವಹಣೆಗೆ ಪೊಲೀಸ್ ಇಲಾಖೆಯಿಂದ ಅಗತ್ಯವಿರುವ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು. ಜತೆಗೆ, ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಬರ ನಿರ್ವಹಣೆಗೆ ಮೊದಲ ಆದ್ಯತೆ ನೀಡುವುದರ ಜೊತೆಗೆ, ಅನಗತ್ಯ ಅದ್ದೂರಿ ಹಾಗೂ ದುಂದುವೆಚ್ಚಗಳಿಗೆ ಅವಕಾಶ ನೀಡದೆ “ಬರ ನಿರ್ವಹಣೆಗೆ ಆದ್ಯತೆ–ಸಂಪ್ರದಾಯಕ್ಕೆ ಗೌರವ” ಎಂಬ ಆಶಯದೊಂದಿಗೆ ದಸರಾ ಆಚರಿಸಲು ಕ್ರಮಕೈಗೊಳ್ಳಬೇಕೆಂದು ಸ್ಪಷ್ಟಪಡಿಸಿದರು.

ಸ್ಥಳೀಯ ಪ್ರತಿಭೆಗಳಿಗೆ ಪ್ರೋತ್ಸಾಹ:

ತುಮಕೂರು ದಸರಾ ಉತ್ಸವವು ಜಿಲ್ಲೆಯ ಸಾಂಸ್ಕೃತಿಕ ಪರಂಪರೆ, ಕವಿಗೋಷ್ಠಿ, ಕಲೆ ಹಾಗೂ ಸ್ಥಳೀಯ ಪ್ರತಿಭೆಗಳನ್ನು ಪರಿಚಯಿಸುವ ಪ್ರಮುಖ ವೇದಿಕೆಯಾಗಬೇಕು. ಪುಸ್ತಕ ಪ್ರದರ್ಶನ, ಸ್ಥಳೀಯ ಕಲಾವಿದರು, ಸಾಂಸ್ಕೃತಿಕ ತಂಡಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಉತ್ಸವವನ್ನು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ವಿವಿಧ ಉಪ ಸಮಿತಿಗಳ ಅಧ್ಯಕ್ಷರು ಹಾಗೂ ಸಂಬಂಧಿಸಿದ ಇಲಾಖೆಗಳ ಸಮನ್ವಯತೆ, ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜ ಬಿ.ವಿ., ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತೆ ಶುಭ ಬಿ., ತುಮಕೂರು ಉಪವಿಭಾಗಾಧಿಕಾರಿ ನಾಹೀದ ಜಂ ಜಂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/09/2026 04:07 pm

Cinque Terre

320

Cinque Terre

0