ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳ್ಳಾಲ: ಭೀಕರ ಅಪಘಾತದಿಂದ ಯುವಕನ ಮೆದುಳು ನಿಷ್ಕ್ರಿಯ- ನೋವಿನ ನಡುವೆಯೂ ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ

ಉಳ್ಳಾಲ: ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಬಳಿ ಸೋಮವಾರ ರಾತ್ರಿ ಸಂಭವಿಸಿದ ಬೈಕ್-ಸ್ಕೂಟರ್ ಮುಖಾಮುಖಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 21 ವರ್ಷದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.

ಕುತ್ತಾರುವಿನ ಆಯೆರೆ ಬೆಟ್ಟು ನಿವಾಸಿಗಳಾದ ಗೋಪಾಲ ಹಾಗೂ ವೇದಾವತಿ ದಂಪತಿಯ ಕಿರಿಯ ಪುತ್ರ ವರ್ಷಿತ್ ಕುಲಾಲ್ (21) ಸೋಮವಾರ ರಾತ್ರಿ ಸುಮಾರು 7.30ಕ್ಕೆ ಕುತ್ತಾರುವಿನಿಂದ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು.

ಈ ವೇಳೆ ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಬಳಿಯ ದುರ್ಗಾ ಆಟೋ ವರ್ಕ್ಸ್ ಶಾಪ್ ಮುಂಭಾಗದಲ್ಲಿ ರಾಣಿಪುರದಿಂದ ಕುತ್ತಾರು ಕಡೆಗೆ ಬರುತ್ತಿದ್ದ ಸ್ಕೂಟರ್‌ಗೆ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದ ತೀವ್ರತೆಗೆ ವರ್ಷಿತ್ ಬೈಕ್‌ನಿಂದ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಅವರ ಮೆದುಳುಪುತ್ರನಿಗೆ ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ವೈದ್ಯರ ಸಲಹೆಯಂತೆ ವರ್ಷಿತ್ ಅವರ ಪೋಷಕರು ಪುತ್ರನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ವಿವಿಧ ಆಸ್ಪತ್ರೆಗಳಿಂದ ಮೂತ್ರಪಿಂಡ, ಯಕೃತ್ತು, ಹೃದಯ ಹಾಗೂ ಶ್ವಾಸಕೋಶಗಳಿಗೆ ಬೇಡಿಕೆ ಬಂದಿದ್ದು, ಅಂಗಾಂಗಗಳನ್ನು ‘ಝೀರೋ ಟ್ರಾಫಿಕ್’ ವ್ಯವಸ್ಥೆಯ ಮೂಲಕ ಸಂಬಂಧಪಟ್ಟ ಆಸ್ಪತ್ರೆಗಳಿಗೆ ರವಾನಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅಪಘಾತದಲ್ಲಿ ಸ್ಕೂಟರ್ ಸವಾರ ಧೀರಜ್ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವರ್ಷಿತ್ ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದರು. ತಂದೆ, ತಾಯಿ ಹಾಗೂ ಏಕೈಕ ಸಹೋದರನನ್ನು ಅಗಲಿದ್ದಾರೆ. ಘಟನೆ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Edited By : Somashekar
PublicNext

PublicNext

16/09/2026 10:00 pm

Cinque Terre

7.8 K

Cinque Terre

1

ಸಂಬಂಧಿತ ಸುದ್ದಿ