ಭಟ್ಕಳ: ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾದ ಮೇಲೆ ಕಲ್ಲು ತೂರಾಟ ನಡೆಸಿ ಕಿಟಕಿ ಗಾಜುಗಳಿಗೆ ಹಾನಿ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಘಟನೆ ಖಂಡಿಸಿ ಮುಸ್ಲಿಂ ಸಮುದಾಯದವರು ಠಾಣೆ ಎದುರು ಜಮಾಯಿಸಿ, ಆರೋಪಿತರನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದರು.
ಬಂದರ ರಸ್ತೆ 5ನೇ ಕ್ರಾಸ್ ನಿವಾಸಿ ಅಬ್ದುಲ್ ಅಲಿಂ (67), ಶಾಹುಲ್ ಅಮೀನ್ ಗವಾಯಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನಲ್ಲಿ ತಿಳಿಸಿರುವಂತೆ, ತಲಾಂದದಿಂದ ಆರಂಭಗೊಂಡ ಗಣೇಶ ವಿಸರ್ಜನಾ ಮೆರವಣಿಗೆ ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದ ವೇಳೆ, ರಸ್ತೆಯ ಪಕ್ಕದ ಪ್ರಥಮ ಮಹಡಿಯಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ನೆಲಮಹಡಿಯಲ್ಲಿರುವ ತಾಜುಸುನ್ನಾ ಅರೇಬಿಕ್ ಮದರಸಾ ಮೇಲೆ ಅಪರಿಚಿತರು ಕಲ್ಲುಗಳನ್ನು ಬಿಸಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಕಲ್ಲು ತೂರಾಟದಿಂದ ಮಸೀದಿ ಹಾಗೂ ಮದರಸಾದ ಕಿಟಕಿ ಗಾಜುಗಳು ಒಡೆದು ಹಾನಿಯಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕೃತ್ಯದಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದು, ವಿವಿಧ ವರ್ಗಗಳ ನಡುವೆ ದ್ವೇಷಕ್ಕೆ ಕಾರಣವಾಗಿ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವ ಉದ್ದೇಶದಿಂದ ಕೃತ್ಯ ಎಸಗಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪಿತರ ಹೆಸರು ಮತ್ತು ವಿಳಾಸ ತಿಳಿದಿಲ್ಲವಾಗಿದ್ದು, ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಅಬ್ದುಲ್ ಅಲಿಂ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ.
ಮಸೀದಿ ಮೇಲೆ ಕಲ್ಲು ತೂರಾಟ ನಡೆದಿರುವ ವಿಷಯ ತಿಳಿಯುತ್ತಿದ್ದಂತೆ ಮುಸ್ಲಿಂ ಸಮುದಾಯದ ನೂರಾರು ಜನರು ಭಟ್ಕಳ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದರು. ಘಟನೆಗೆ ಕಾರಣರಾದವರನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕೆಲ ಸದಸ್ಯರನ್ನು ಠಾಣೆಗೆ ಕರೆಸಿಕೊಂಡು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕಲ್ಲು ತೂರಾಟ ನಡೆಸಿದವರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ, ಎ.ಎಸ್.ಪಿ. ರಾನು ಗುಪ್ತ, ಸಿಪಿಐ ದಿವಾಕರ ಪಿ.ಎಂ. ಹಾಗೂ ಪಿಎಸ್‌ಐ ನವೀನ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಲಭ್ಯವಿರುವ ಇತರ ಸಾಕ್ಷ್ಯಗಳನ್ನು ಪರಿಶೀಲಿಸಿ ಆರೋಪಿತರ ಪತ್ತೆಗೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ.
ಈ ಸಂದರ್ಭದಲ್ಲಿ ಭಟ್ಕಳ ತಂಜೀಮ್ ಸಂಸ್ಥೆಯ ಅಧ್ಯಕ್ಷ ಇನಾಯಿತುಲ್ಲಾ ಶಾಬಂದ್ರಿ, ಅಬ್ದುಲ್ ಮುನೀರ್ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಠಾಣೆಗೆ ಆಗಮಿಸಿ, ಘಟನೆಗೆ ಕಾರಣರಾದವರನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಒತ್ತಾಯಿಸಿದರು
PublicNext
17/09/2026 12:05 pm