ಕಲಬುರಗಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಲಬುರಗಿ ಪ್ರವಾಸದ ಸಂದರ್ಭದಲ್ಲೇ ನಗರದ ಹೈಕೋರ್ಟ್ ಕ್ರಾಸ್ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ರಾತ್ರೋರಾತ್ರಿ ಸ್ಥಾಪಿಸಿ, ಬಳಿಕ ಮಹಾನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿರುವ ಘಟನೆ ನಡೆದಿದೆ.
ಸೆಪ್ಟೆಂಬರ್ 16ರ ರಾತ್ರಿ ಕೆಲವರು ಯಾವುದೇ ಪೂರ್ವಾನುಮತಿ ಪಡೆಯದೆ ಸಾರ್ವಜನಿಕ ಸ್ಥಳದಲ್ಲಿ ಪ್ರತಿಮೆಯನ್ನು ಸ್ಥಾಪಿಸಿದ್ದರು ಎಂದು ವರದಿಯಾಗಿದೆ. ವಿಷಯ ಅಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆ ಪೊಲೀಸ್ ಬಂದೋಬಸ್ತ್‌ನಲ್ಲಿ ಪಾಲಿಕೆ ಸಿಬ್ಬಂದಿ ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ. ಪ್ರತಿಮೆ ಸ್ಥಾಪನೆಗೆ ಅಗತ್ಯ ಅನುಮತಿ ಪಡೆಯದಿರುವುದೇ ತೆರವಿಗೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದರು. ಇದೇ ವೇಳೆ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆಯಾಗಿದ್ದು, ಶಿವಕುಮಾರ್ ಅವರು ಅಫಜಲಪುರದತ್ತ ತೆರಳಬೇಕಿದ್ದ ಮಾರ್ಗದಲ್ಲೇ ಈ ಸ್ಥಳವಿತ್ತು ಎಂದು ವರದಿಗಳು ತಿಳಿಸಿವೆ.
ಪ್ರತಿಮೆ ಸ್ಥಾಪಿಸಿದವರು ಯಾರು ಎಂಬುದು ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಅನುಮತಿ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಪ್ರತಿಮೆ ಸ್ಥಾಪಿಸಿರುವುದರಿಂದ ಪಾಲಿಕೆ ಅಧಿಕಾರಿಗಳು ಅದನ್ನು ತೆರವುಗೊಳಿಸಿದ್ದು, ಘಟನೆ ಕಲಬುರಗಿಯಲ್ಲಿ ಚರ್ಚೆಗೆ ಕಾರಣವಾಗಿದೆ.
Kshetra Samachara
17/09/2026 08:31 pm
LOADING...