ತುಮಕೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಯು ಸೆಪ್ಟೆಂಬರ್ 20ರಂದು ತುಮಕೂರು ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಜಿಲ್ಲೆಯಲ್ಲಿ ಈ ಹಿಂದೆ ನೇಮಕಾತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಅದೇ ರೀತಿಯಲ್ಲಿ ಈ ಪರೀಕ್ಷೆಯನ್ನೂ ಶಾಂತಿಯುತ, ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ಲೋಪರಹಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿಯೊಬ್ಬ ಅಭ್ಯರ್ಥಿಗೂ ಸಮಾನ ಅವಕಾಶ ಕಲ್ಪಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿಗಳು, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ಸಿಸಿಟಿವಿ ಕ್ಯಾಮೆರಾಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಮುಂಚಿತವಾಗಿ ಪರಿಶೀಲಿಸಿ, ತಾಂತ್ರಿಕ ದೋಷಗಳಿದ್ದಲ್ಲಿ ಕೂಡಲೇ ಸರಿಪಡಿಸಬೇಕು ಎಂದು ನಿರ್ದೇಶನ ನೀಡಿದರು.
ವೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ವಸ್ತ್ರ ಸಂಹಿತೆ ಅಧಿಕಾರಿಗಳು, ಮಾಸ್ಟರ್ ಟ್ರೇನರ್‌ಗಳು ಹಾಗೂ ಇತರೆ ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಅರಿತು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಯ ಗೌಪ್ಯತೆ, ನಿಯಮಪಾಲನೆ ಹಾಗೂ ಪಾರದರ್ಶಕತೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ವೀಕ್ಷಕರು, ಮಾಸ್ಟರ್ ಟ್ರೇನರ್‌ಗಳು, ಮಾರ್ಗಾಧಿಕಾರಿಗಳು, ಉಪ ಮುಖ್ಯ ಅಧೀಕ್ಷಕರು, ವಸ್ತ್ರ ಸಂಹಿತೆ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.
PublicNext
18/09/2026 08:00 am