ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕ ಭರತ್ ರೆಡ್ಡಿ

ಬಳ್ಳಾರಿ : ಆಡಳಿತ ಯಂತ್ರವನ್ನು ಚುರುಕುಗೊಳಿಸುವ ಉದ್ದೇಶದಿಂದ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಅವರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ, ಅಧಿಕಾರಿಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ಕೆಲವು ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಕೆಲವರು ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಎಲ್ಲರಿಗೂ ಚುರುಕು ಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯದಂತೆ ಜನರ ನಡುವೆ ಇದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ. ಚುನಾವಣೆ ಸಂದರ್ಭದಲ್ಲಿ ಯಾವ ರೀತಿ ಜನರ ಮನೆ ಬಾಗಿಲಿಗೆ ಹೋಗುತ್ತೇವೆಯೋ, ಅದೇ ರೀತಿ ಜನರ ಬಳಿಗೆ ತೆರಳಿ ಸೇವೆ ಸಲ್ಲಿಸಬೇಕು ಎಂದರು.

ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ವಿವಿಧ ಪಿಂಚಣಿಗಳ ವಿತರಣೆಯಲ್ಲಿ ವಿಳಂಬವಾಗಿರುವ ಕುರಿತು ದೂರುಗಳು ಬಂದಿವೆ. ಸರ್ವರ್ ಸಮಸ್ಯೆಯ ಬಗ್ಗೆಯೂ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು.

ಇನ್ನು ಮುಂದೆ ಎರಡು ದಿನಕ್ಕೊಮ್ಮೆ ತಾಲೂಕು ಕಚೇರಿಗೆ ಭೇಟಿ ನೀಡುವುದಾಗಿ ಹೇಳಿದ ಶಾಸಕ ಭರತ್ ರೆಡ್ಡಿ, ತಾಲೂಕು ಕಚೇರಿ ಮಾತ್ರವಲ್ಲದೆ, ವಿವಿಧ ಸರ್ಕಾರಿ ಕಚೇರಿಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದರು.

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನರ ಸೇವೆ ಮಾಡಬೇಕು. ಜನರಿಗೆ ತೊಂದರೆ ನೀಡುವ ಅಧಿಕಾರಿಗಳ ವಿರುದ್ಧ ಅಮಾನತು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜನಾರ್ದನ ರೆಡ್ಡಿಗೆ ಭರತ್ ರೆಡ್ಡಿ ತಿರುಗೇಟು

ಇದೇ ವೇಳೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಶಾಸಕ ಭರತ್ ರೆಡ್ಡಿ, ಭಗವದ್ಗೀತೆಯನ್ನು ಉಲ್ಲೇಖಿಸಿ ತಿರುಗೇಟು ನೀಡಿದರು.

ಯುದ್ಧದ ಬಗ್ಗೆ ಮುಂಚಿತವಾಗಿ ಹೆಚ್ಚು ಮಾತನಾಡಬಾರದು. ರಣರಂಗದಲ್ಲಿ ಯಾರು ರಣಹೇಡಿಗಳು, ಯಾರು ಹೋರಾಟಗಾರರು ಎಂಬುದು ಮುಂದೆ ಗೊತ್ತಾಗುತ್ತದೆ ಎಂದು ಹೇಳಿದರು.

2028ರ ಚುನಾವಣೆಯ ಸಂದರ್ಭದಲ್ಲಿ ಜನರೇ ಉತ್ತರ ನೀಡಲಿದ್ದಾರೆ. ಸಾವಿರ ಮಾತುಗಳಿಗೆ ಒಂದೇ ಉತ್ತರ ಜನರ ಬಾಯಿಂದಲೇ ಸಿಗಲಿದೆ. ಜನರ ಮನಸ್ಸು ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಅಂತಿಮ ತೀರ್ಮಾನವನ್ನು ಜನರೇ ಮಾಡುತ್ತಾರೆ ಎಂದು ತಿಳಿಸಿದರು.

ಇನ್ನು ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಉದ್ಘಾಟನೆಯನ್ನು ದೊಡ್ಡ ಮಟ್ಟದಲ್ಲಿ ನಡೆಸಲಾಗುವುದು. ಅಧಿವೇಶನದಲ್ಲಿ ಕಾರ್ಯಕ್ರಮದ ಮುಹೂರ್ತ ನಿಗದಿಪಡಿಸಲಾಗುವುದು ಎಂದರು.

ಬಳ್ಳಾರಿ ಅಭಿವೃದ್ಧಿ ಮಾಡುವುದೇ ನಮ್ಮ ಏಕೈಕ ಗುರಿ. ಬೇರೆ ಯಾವುದೇ ವಿಚಾರಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಶಾಸಕ ಭರತ್ ರೆಡ್ಡಿ ಸ್ಪಷ್ಟಪಡಿಸಿದರು.

ಬಳ್ಳಾರಿ ನಗರದಲ್ಲಿ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸುವ ಭರವಸೆಯೊಂದಿಗೆ ಶಾಸಕ ಭರತ್ ರೆಡ್ಡಿ ಅವರ ತಾಲೂಕು ಕಚೇರಿ ಭೇಟಿ ಮಹತ್ವ ಪಡೆದುಕೊಂಡಿದೆ.

ವರದಿ : ಹೊನ್ನುರಸ್ವಾಮಿ ಕೆ.ಟಿ., ಪಬ್ಲಿಕ್ ನೆಕ್ಸ್ಟ್, ಬಳ್ಳಾರಿ

Edited By :
PublicNext

PublicNext

18/09/2026 11:08 am

Cinque Terre

4.38 K

Cinque Terre

0

ಸಂಬಂಧಿತ ಸುದ್ದಿ