ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಲಹೊಂಗಲ: ದೇಶನೂರ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ

ಬೈಲಹೊಂಗಲ: ಗ್ರಾಮದ ಸ್ವಚ್ಛತೆ, ಕುಡಿಯುವ ನೀರು ಹಾಗೂ ಬೀದಿದೀಪಗಳ ಸಮಸ್ಯೆಗಳ ಕುರಿತು ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂದು ಆರೋಪಿಸಿ ಅಸಮಾಧಾನಗೊಂಡ ಗ್ರಾಮಸ್ಥರು ಶುಕ್ರವಾರ ಕಸವನ್ನು ಗ್ರಾಮ ಪಂಚಾಯಿತಿ ಕಚೇರಿ ಆವರಣಕ್ಕೆ ತಂದು ಹಾಕಿ, ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಶ್ರೀ ಗಣೇಶೋತ್ಸವದ ಐದನೇ ದಿನವಾದ ಶುಕ್ರವಾರ ಗ್ರಾಮದ ಸಂಜೆ ಪೇಟೆಯಲ್ಲಿ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಆದರೆ ಹಿಂದಿನ ದಿನದ ಕಾರ್ಯಕ್ರಮದ ಬಳಿಕ ಪೇಟೆಯಲ್ಲಿ ಸಂಗ್ರಹವಾಗಿದ್ದ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡದ ಹಿನ್ನೆಲೆಯಲ್ಲಿ ಪ್ರಮುಖ ಸಾರ್ವಜನಿಕ ಸ್ಥಳದಲ್ಲೇ ಕಸದ ರಾಶಿ ಬಿದ್ದಿದ್ದು, ಸ್ವಚ್ಛತೆ ಸಮಸ್ಯೆ ಉಂಟಾಗಿತ್ತು. ಕಸ ತೆರವುಗೊಳಿಸುವಂತೆ ಪಂಚಾಯಿತಿ ಸಿಬ್ಬಂದಿಗೆ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ಪಂಚಾಯಿತಿ ಕಾರ್ಮಿಕರಿಗೆ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಅವರು ಕೆಲಸಕ್ಕೆ ಹಾಜರಾಗುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದ್ದು, ಇದರಿಂದ ಗ್ರಾಮದ ಸ್ವಚ್ಛತಾ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ ಎಂದು ಗ್ರಾಮಸ್ಥರು ದೂರಿದರು. ಗ್ರಾಮದಲ್ಲಿ ಕುಡಿಯುವ ನೀರು, ಬೀದಿದೀಪ ಹಾಗೂ ಸ್ವಚ್ಛತೆಯಂತಹ ಮೂಲಭೂತ ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕು. ಅಲ್ಲದೆ, ಪಂಚಾಯಿತಿ ಸಿಬ್ಬಂದಿಯ ವೇತನ ಸಮಸ್ಯೆಯನ್ನು ಕೂಡಲೇ ಬಗೆಹರಿಸಿ ನಿಯಮಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಸಾಬ ಪೊಲೀಸನವರ, “ವಿಷಯ ನನ್ನ ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಯೋಗ್ಯ ಕ್ರಮ ಕೈಗೊಳ್ಳಲಾಗುವುದು. ಗ್ರಾಮಸ್ಥರ ಸಹಕಾರವೂ ಅತಿ ಮುಖ್ಯ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಪ್ರಶಾಂತ ಚಡಿಚಾಳ, ಸಂತೋಷ ಮಿರಜಕರ, ಶ್ರೀನಿವಾಸ ಚಡಿಚಾಳ, ಸುಂದರ ಮಿರಜಕರ, ಅನಿಲ ಹಳಿಜೋಳ, ನೀಲಕಂಠ ಸೊಗಲಿ, ಪ್ರಮೋದ ಚಡಿಚಾಳ ಹಾಗೂ ಕಿರಣ ರಣಕಾಲಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Edited By :
PublicNext

PublicNext

19/09/2026 07:54 am

Cinque Terre

7.59 K

Cinque Terre

0

ಸಂಬಂಧಿತ ಸುದ್ದಿ