ಬೆಳಗಾವಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಂದೇ ಮಾತರಂ ವಿರೋಧಿ ಧೋರಣೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮೀಣ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಬೆಳಗಾವಿ ನಗರದಲ್ಲಿ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಸರ್ಕಾರವು ರಾಷ್ಟ್ರಭಕ್ತಿಯ ಸಂಕೇತವಾಗಿರುವ ವಂದೇ ಮಾತರಂನ ಸಂಪೂರ್ಣ ಗೀತೆಯನ್ನು ಹಾಡಲು ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ಅಂಗವಾಗಿ ಬೆಳಿಗ್ಗೆ ಬೆಳಗಾವಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು.
ಸಭೆಯಲ್ಲಿ ಸರ್ಕಾರದ ಧೋರಣೆಯನ್ನು ಖಂಡಿಸುವ ಕುರಿತು ಚರ್ಚೆ ನಡೆಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸಲಾಯಿತು.
ಸಭೆಯ ಬಳಿಕ ನೂರಾರು ಬಿಜೆಪಿ ಕಾರ್ಯಕರ್ತರು ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿದರು. ‘ವಂದೇ ಮಾತರಂ’ ಸೇರಿದಂತೆ ದೇಶಭಕ್ತಿಯ ಘೋಷಣೆಗಳೊಂದಿಗೆ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಒಟ್ಟಾಗಿ ಸಂಪೂರ್ಣ ವಂದೇ ಮಾತರಂ ಗೀತೆಯನ್ನು ಹಾಡಿದರು. ಈ ವೇಳೆ ಸ್ಥಳದಲ್ಲಿದ್ದ ನಾಗರಿಕರೂ ಗಾಯನಕ್ಕೆ ಕೈಜೋಡಿಸಿದರು.ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ವಂದೇ ಮಾತರಂ ಕೇವಲ ಗೀತೆಯಲ್ಲ; ಅದು ಭಾರತದ ಸ್ವಾತಂತ್ರ್ಯ ಹೋರಾಟದೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ರಾಷ್ಟ್ರೀಯ ಭಾವನೆಯ ಸಂಕೇತವಾಗಿದೆ. ಇಂತಹ ಗೀತೆಯ ವಿಚಾರದಲ್ಲಿ ಯಾವುದೇ ರೀತಿಯ ವಿರೋಧ ಅಥವಾ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.
ಸರ್ಕಾರ ತನ್ನ ಧೋರಣೆಯನ್ನು ಮರುಪರಿಶೀಲಿಸಿ, ರಾಷ್ಟ್ರಭಕ್ತಿ ಹಾಗೂ ರಾಷ್ಟ್ರೀಯ ಭಾವನೆಗಳಿಗೆ ಗೌರವ ನೀಡಬೇಕು ಎಂದು ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವಿ. ನಾಗರಾಜ್, ಬೆಳಗಾವಿ ಗ್ರಾಮೀಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಷ್ ಪಾಟೀಲ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಮೋದ ಕೋಚೇರಿ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ. ಸೋನಾಲಿ ಸರನೋಬತ್, ಮಾಜಿ ಶಾಸಕ ಅರವಿಂದ ಪಾಟೀಲ್, ಜಿಲ್ಲಾ ಉಪಾಧ್ಯಕ್ಷ ಸಂಜಯ ಕುಬಾಳ್, ಜಿಲ್ಲಾ ಕಾರ್ಯದರ್ಶಿ ಧನಶ್ರೀ ಸರದೇಸಾಯಿ, ಮುರಗೇಂದ್ರಗೌಡ ಪಾಟೀಲ್ ಸೇರಿದಂತೆ ಬೆಳಗಾವಿ ಗ್ರಾಮೀಣ ಜಿಲ್ಲೆಯ ನೂರಾರು ಬಿಜೆಪಿ ಕಾರ್ಯಕರ್ತರು, ಮಹಿಳಾ ಮೋರ್ಚಾ ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
PublicNext
19/09/2026 12:32 pm