ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ಸಿಕ್ಕಿಬಿದ್ದ IIT ವಿದ್ಯಾರ್ಥಿ.. ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ.. ಕ್ಯಾಂಪಸ್‌ನಲ್ಲಿ ಭುಗಿಲೆದ್ದ ಆಕ್ರೋಶ

ಮುಂಬೈ : ದೇಶದ ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆಯಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಪರೀಕ್ಷೆಯ ವೇಳೆ ಕೃತಕ ಬುದ್ಧಿಮತ್ತೆ (AI) ಆಧಾರಿತ ‘ಚಾಟ್‌ಜಿಪಿಟಿ’ (ChatGPT) ಬಳಸುತ್ತಿದ್ದ ಆರೋಪದ ಮೇಲೆ ಸಿಕ್ಕಿಬಿದ್ದ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಯ ಬೆನ್ನಲ್ಲೇ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದೆ.

ಹೌದು ಐಐಟಿ ಬಾಂಬೆಯ ಎನರ್ಜಿ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ 2ನೇ ವರ್ಷದ ವ್ಯಾಸಂಗ ಮಾಡುತ್ತಿದ್ದ ಸಾಹಿಲ್, ಶುಕ್ರವಾರ ಬೆಳಗ್ಗೆ ನಡೆದ ಪರೀಕ್ಷೆಯ ಸಂದರ್ಭದಲ್ಲಿ ಮೊಬೈಲ್ ಮೂಲಕ ಪ್ರಶ್ನೆಪತ್ರಿಕೆಯನ್ನು ಚಾಟ್‌ಜಿಪಿಟಿಗೆ ಅಪ್‌ಲೋಡ್ ಮಾಡಿ ಉತ್ತರ ಪಡೆಯಲು ಯತ್ನಿಸುತ್ತಿದ್ದ ವೇಳೆ ಸಿಬ್ಬಂದಿಯ ಕೈಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದ.

ಘಟನೆ ಬಳಿಕ ವಿದ್ಯಾರ್ಥಿ ಮೇಲೆ ಯಾವುದೇ ತಕ್ಷಣದ ಶಿಸ್ತುಕ್ರಮ ಕೈಗೊಂಡಿರಲಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಕೋರ್ಸ್ ಬೋಧಕರು ಹಾಗೂ ವಿಭಾಗದ ಮುಖ್ಯಸ್ಥರು (HOD) ವಿದ್ಯಾರ್ಥಿಗೆ ಕೌನ್ಸೆಲಿಂಗ್ ನಡೆಸಿ, ಇದರಿಂದ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಧೈರ್ಯ ತುಂಬಿ ಕೊಠಡಿಗೆ ಕಳುಹಿಸಿದ್ದರು ಎಂದು ಆಡಳಿತ ಮಂಡಳಿ ಹೇಳಿದೆ.

ಕೌನ್ಸೆಲಿಂಗ್ ಮುಗಿಸಿ ತನ್ನ ಕೊಠಡಿಗೆ ಮರಳಿದ್ದ ಸಾಹಿಲ್, ಸಂಜೆಯ ವೇಳೆಗೆ ಶವವಾಗಿ ಪತ್ತೆಯಾಗಿದ್ದಾನೆ. ಆತ ತೀವ್ರ ಮುಜುಗರ ಹಾಗೂ ಮಾನಸಿಕ ಆಘಾತದಿಂದ ಈ ಕಠಿಣ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ವಿದ್ಯಾರ್ಥಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಆಡಳಿತ ಮಂಡಳಿಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಘಟನೆ ಕುರಿತು ಪಾರದರ್ಶಕ ತನಿಖೆ ನಡೆಸಬೇಕು ಮತ್ತು ಆಡಳಿತ ಮಂಡಳಿ ಹೊಣೆಗಾರಿಕೆ ಹೊರಬೇಕು ಎಂದು ಆಗ್ರಹಿಸಿದರು.

ಘಟನೆಗೆ ಐಐಟಿ ಬಾಂಬೆ ತೀವ್ರ ಸಂತಾಪ ಸೂಚಿಸಿದ್ದು, ವಿದ್ಯಾರ್ಥಿಯ ಕುಟುಂಬ ಹಾಗೂ ಸಹಪಾಠಿಗಳಿಗೆ ಸಾಂತ್ವನ ತಿಳಿಸಿದೆ. ಸಾವಿಗೆ ಕಾರಣವಾದ ನಿಖರ ಅಂಶಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Edited By : Nirmala Aralikatti
PublicNext

PublicNext

19/09/2026 02:55 pm

Cinque Terre

12.6 K

Cinque Terre

1

ಸಂಬಂಧಿತ ಸುದ್ದಿ