ಬೆಂಗಳೂರು : ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಸಂಬಂಧಿಸಿದಂತೆ ಮೂಲಸೌಕರ್ಯ, ರಸ್ತೆ ಗುಂಡಿಗಳು, ಬ್ಲ್ಯಾಕ್ ಸ್ಪಾಟ್ ಹಾಗೂ ರಸ್ತೆ ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಆಯುಕ್ತ ಡಿ.ಎಸ್. ರಮೇಶ್ ಅವರು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಮಸ್ಯೆಗಳಿಂದ ಸಾರ್ವಜನಿಕರಿಗೆ ಎದುರಾಗುತ್ತಿರುವ ತೊಂದರೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಆಯುಕ್ತರು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗುಂಜೂರು ಜಂಕ್ಷನ್‌ನ ಶ್ರೀರಾಮ ದೇವಸ್ಥಾನದ ಬಳಿ ರಸ್ತೆ ಗುಂಡಿಗಳಿಂದ ಉಂಟಾಗಿರುವ ಸಮಸ್ಯೆಯನ್ನು ಪರಿಶೀಲಿಸಿದ ಆಯುಕ್ತರು, ರಸ್ತೆ ಗುಂಡಿಗಳನ್ನು ತಕ್ಷಣ ಮುಚ್ಚಿ, ಸುಗಮ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ರಸ್ತೆ ಗುಂಡಿಗಳಿಂದಾಗಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಪ್ರಥಮ ಆದ್ಯತೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದರು.
ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ರಸ್ತೆಯಲ್ಲಿ ಸಂಚರಿಸುವ ಹಿನ್ನೆಲೆಯಲ್ಲಿ, ದೊಡ್ಡ ಪ್ರಮಾಣದ ರಸ್ತೆ ಗುಂಡಿಗಳು ಹಾಗೂ ಕಲ್ವರ್ಟ್ ಸ್ಲ್ಯಾಬ್‌ಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ತ್ವರಿತವಾಗಿ ಸರಿಪಡಿಸಿ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಈ ರಸ್ತೆಯಲ್ಲಿ ದಿನನಿತ್ಯ ಸಂಚರಿಸುವ ಅಂದಾಜು ವಾಹನಗಳ ಸಂಖ್ಯೆ, ಭಾರಿ ಗಾತ್ರದ ವಾಹನಗಳ ಸಂಚಾರ ನಿರ್ಬಂಧ ಹಾಗೂ ಶಾಲಾ ಮಕ್ಕಳ ಬಸ್‌ಗಳ ಸುಗಮ ಸಂಚಾರಕ್ಕೆ ಅಗತ್ಯವಿರುವ ಬದಲಿ ಸಂಚಾರ ಮಾರ್ಗದ ಬಗ್ಗೆ ಸಂಚಾರಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಸಂಚಾರ ನಿಯಮಗಳ ಬದಲಾವಣೆಗೆ ಕ್ರಮ ವಹಿಸುವಂತೆ ಸಂಚಾರಿ ಪೊಲೀಸರಿಗೆ ಆಯುಕ್ತರು ಸೂಚಿಸಿದರು.
ಆಯುಕ್ತರ ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಮುಖ್ಯ ಅಭಿಯಂತರರಾದ ಬಸವರಾಜು ಎಂ., ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು, ಗುತ್ತಿಗೆದಾರರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
19/09/2026 04:04 pm