ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ : ಜನಾಭಿಪ್ರಾಯ ಸಂಗ್ರಹಿಸಿ ಅಧಿವೇಶನದಲ್ಲಿ ಚರ್ಚೆ ಮಾಡ್ತೇನೆ: ಡಿ.ಕೆ. ಶಿವಕುಮಾರ್

ಶಿವಮೊಗ್ಗ : ಮಲೆನಾಡು ಭಾಗದ ಜ್ವಲಂತ ಸಮಸ್ಯೆಗಳಾದ ಕಸ್ತೂರಿ ರಂಗನ್ ವರದಿ ಜಾರಿ, ಬರಪೀಡಿತ ತಾಲೂಕುಗಳ ಘೋಷಣೆ ಹಾಗೂ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀರ್ಥಹಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಈ ತಿಂಗಳ 27ರ ಒಳಗೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ತನ್ನ ಅಂತಿಮ ಅಭಿಪ್ರಾಯವನ್ನು ತಿಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲು ತಾವು ಮಲೆನಾಡು ಭಾಗಕ್ಕೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.

"ಶಾಸಕರು, ಜನಪ್ರತಿನಿಧಿಗಳು ಮಾತ್ರವಲ್ಲದೆ ಸಾರ್ವಜನಿಕರ ಅಭಿಪ್ರಾಯವನ್ನೂ ಸಂಗ್ರಹಿಸಲಾಗುತ್ತಿದೆ. ಇತ್ತೀಚೆಗೆ ಹೆಬ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲೂ ಸಾರ್ವಜನಿಕರು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ನಮಗೆ ಜನರ ಬದುಕಿನ ಜೊತೆಗೆ ಪರಿಸರವೂ ಉಳಿಯಬೇಕಿದೆ. ಎಲ್ಲರ ಅಭಿಪ್ರಾಯ ಪಡೆದು ಮುಂದಿನ ಹೆಜ್ಜೆ ಇಡಲಾಗುವುದು. ಈ ವಿಚಾರವಾಗಿ ಸೋಮವಾರದಿಂದ ಆರಂಭವಾಗುವ ಅಧಿವೇಶನದಲ್ಲಿ ಇನ್ನಷ್ಟು ವಿಸ್ತೃತ ಚರ್ಚೆ ನಡೆಯಲಿದೆ," ಎಂದರು.

ಸರ್ಕಾರದ ನಿಲುವು

ಶಿವಮೊಗ್ಗ ಜಿಲ್ಲೆಯನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಒಂದು ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಮತ್ತು ಪಟ್ಟಿಗೆ ಸೇರಿಸಲು ಅದರದ್ದೇ ಆದ ಮಾರ್ಗಸೂಚಿ ಹಾಗೂ ನಿಯಮಗಳಿವೆ. ಪ್ರಸ್ತುತ ಇನ್ನೂ ಮಳೆ ಬರುವ ನಿರೀಕ್ಷೆಯಿರುವುದರಿಂದ ಈ ವಿಚಾರದಲ್ಲಿ ಅವಸರ ಪಡುವ ಅಗತ್ಯವಿಲ್ಲ. ಈ ಬಗ್ಗೆಯೂ ಸೋಮವಾರದಿಂದ ನಡೆಯಲಿರುವ ಶಾಸನಸಭೆಯ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು," ಎಂದು ಸ್ಪಷ್ಟಪಡಿಸಿದರು.

ಶರಾವತಿ ಯೋಜನೆಯ ಮುಳುಗಡೆ ಸಂತ್ರಸ್ತರಿಗೆ ಇಂದಿಗೂ ಸೂಕ್ತ ಪರಿಹಾರ ಸಿಗದ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, "ಈ ಹಿಂದೆ ನಾವೂ ಕೂಡ ಸಮಾವೇಶ ನಡೆಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದ್ದೆವು. ಮುಳುಗಡೆ ಸಂತ್ರಸ್ತರಿಗೆ ಪರಿಹಾರ ನೀಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಆದರೆ, ಪರಿಸರ ಹೋರಾಟಗಾರರೊಬ್ಬರು ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಕಾನೂನು ತೊಡಕನ್ನು ನಿವಾರಿಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಗಂಭೀರ ಚಿಂತನೆ ನಡೆಸುತ್ತಿದೆ," ಎಂದರು.

Edited By :
PublicNext

PublicNext

19/09/2026 06:04 pm

Cinque Terre

3.54 K

Cinque Terre

0

ಸಂಬಂಧಿತ ಸುದ್ದಿ