ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ, ಸೋಮವಾರಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ. ಮುಂದಿನ ದಿನಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳಿಗೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಎಲ್-ನಿನೋ ಪರಿಣಾಮದಿಂದ ಈ ಬಾರಿ ಮುಂಗಾರು ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಶೇ. 33ರಿಂದ 50ರಷ್ಟು ಕಡಿಮೆ ಮಳೆಯಾಗಿರುವ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.
ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಲಿಂಗರಾಜು ದೊಡ್ಡಮನಿ, ಈಗಾಗಲೇ ಜಾನುವಾರುಗಳಿಗೆ ಮೇವು ದಾಸ್ತಾನು ಇದ್ದು, 46 ವಾರಗಳ ಕಾಲ ಬರುವಷ್ಟು ಮೇವು ಸಂಗ್ರಹವಿದೆ ಎಂದು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಗೆ 2,340 ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಲು ಹಂಚಿಕೆ ಮಾಡಲಾಗಿದ್ದು, ಶೀಘ್ರದಲ್ಲೇ ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಲಾಗುತ್ತದೆ ಎಂದು ಡಾ. ಲಿಂಗರಾಜು ದೊಡ್ಡಮನಿ ವಿವರಿಸಿದರು.
ಹಾಲು ಕರೆಯುವ ಹಸುಗಳಿಗೆ ಹೆಚ್ಚಿನ ಪ್ರೋಟೀನ್‌ಯುಕ್ತ ಮೇವು ಒದಗಿಸುವ ನಿಟ್ಟಿನಲ್ಲಿ ಅಜೋಲ ಬೆಳೆಸಲು 250 ರೈತರಿಗೆ ಪ್ರೋತ್ಸಾಹ ನೀಡಲಾಗುತ್ತದೆ. ಜತೆಗೆ ಹಾಲು ಒಕ್ಕೂಟದಿಂದಲೂ ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಲು ಕ್ರಮವಹಿಸಲಾಗುತ್ತದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು.
PublicNext
20/09/2026 05:47 am