ಬೆಂಗಳೂರು : ರಸ್ತೆಗಳಲ್ಲಿ ಸಾರ್ವಜನಿಕರಿಗೆ ಭೀತಿ ಹುಟ್ಟಿಸುತ್ತಿದ್ದ ಇಬ್ಬರು ಪುಡಿರೌಡಿಗಳನ್ನು ತಿಲಕ್ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನದೀಂ ಹಾಗೂ ಜುನೈದ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಜಯನಗರದ 9ನೇ ಬ್ಲಾಕ್‌ನ ನಡುರಸ್ತೆಯಲ್ಲಿ ಈ ಆರೋಪಿಗಳು ಲಾಂಗ್ ಹಿಡಿದು ಸಾರ್ವಜನಿಕರಿಗೆ ಭಯ ಹುಟ್ಟಿಸುವಂತೆ ಓಡಾಡುತ್ತಿದ್ದರು. ಪುಂಡರ ಈ ಅಟ್ಟಹಾಸವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದರು.
ಆರೋಪಿಗಳು ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಿಂದ ಎಚ್ಚೆತ್ತುಕೊಂಡ ತಿಲಕ್ ನಗರ ಪೊಲೀಸರು ತಕ್ಷಣ ಕಾರ್ಯಾಚರಣೆಗೆ ಇಳಿದು, ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದರು.
ಕೊನೆಗೂ ಇಬ್ಬರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸರ ಈ ತ್ವರಿತ ಕ್ರಮದಿಂದ ಸ್ಥಳೀಯ ಸಾರ್ವಜನಿಕರು ಹಾಗೂ ವ್ಯಾಪಾರಿಗಳು ನಿರಾಳರಾಗಿದ್ದಾರೆ
PublicNext
20/09/2026 04:28 pm
LOADING...