ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಪಡೆಯ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಇಂದು ನಡೆದ ಲಿಖಿತ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಿಳಿಸಿದೆ.
ಮಿಕ್ಕುಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಒಟ್ಟು 2,314 ಹುದ್ದೆಗಳಿಗಾಗಿ ಈ ಪರೀಕ್ಷೆ ನಡೆಸಲಾಗಿದೆ.
ಪರೀಕ್ಷೆಗೆ ಅಭ್ಯರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಹಾಜರಾಗಿದ್ದಾರೆ. ಮಿಕ್ಕುಳಿಕೆ ವೃಂದದ 1,42,912 ಅಭ್ಯರ್ಥಿಗಳ ಪೈಕಿ 1,12,125 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಶೇ.78ರಷ್ಟು ಹಾಜರಾತಿ ದಾಖಲಾಗಿದೆ. ಕಲ್ಯಾಣ ಕರ್ನಾಟಕ ವೃಂದದಲ್ಲಿ 38,332 ಅಭ್ಯರ್ಥಿಗಳ ಪೈಕಿ 32,694 ಅಭ್ಯರ್ಥಿಗಳು ಹಾಜರಾಗಿದ್ದು, ಶೇ.85ರಷ್ಟು ಹಾಜರಾತಿ ದಾಖಲಾಗಿದೆ.
ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳ ಒಟ್ಟು 333 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ಮಿಕ್ಕುಳಿಕೆ ವೃಂದದ ಅಭ್ಯರ್ಥಿಗಳಿಗೆ ಬೆಳಗ್ಗೆ 10.30ಕ್ಕೆ ಪರೀಕ್ಷೆ ನಡೆದರೆ, ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಮಧ್ಯಾಹ್ನ 3 ಗಂಟೆಗೆ ಪರೀಕ್ಷೆ ನಡೆಸಲಾಗಿದೆ.
ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಅಥವಾ ಲೋಪವಾಗದಂತೆ ಕೆಇಎ ಕಚೇರಿಯಲ್ಲಿ ವಿಶೇಷ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿತ್ತು. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಹಾಗೂ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕಮಾಂಡ್ ಸೆಂಟರ್‌ನಲ್ಲಿ ಉಪಸ್ಥಿತರಿದ್ದು, ಪರೀಕ್ಷಾ ಪ್ರಕ್ರಿಯೆಯ ಮೇಲೆ ನಿರಂತರ ನಿಗಾ ವಹಿಸಿದ್ದರು.
PublicNext
20/09/2026 07:46 pm
LOADING...