ಕಲಬುರಗಿ: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ (Delimitation) ಗಾಗಿ ಕಾಯದೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಬುಧವಾರ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಒಟ್ಟಿಗೆ ಕುಳಿತು ಚರ್ಚೆ ನಡೆಸಬೇಕು. ರಿಜಿಜು ಅವರಿಗೆ ಸಂಪೂರ್ಣ ಅಧಿಕಾರವಿಲ್ಲ, ಮೋದಿ ಮತ್ತು ಅಮಿತ್ ಶಾ ಹೇಳಿದಂತೆ ನಡೆದುಕೊಳ್ಳುತ್ತಾರೆ. ನಿಜವಾಗಿಯೂ ಅಧಿಕಾರವಿದ್ದರೆ ನಾಳೆಯೇ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಲಿ. ಕಾಂಗ್ರೆಸ್ ಬೆಂಬಲ ನೀಡಲಿದೆ. ಈಗಾಗಲೇ ಬೆಂಬಲ ನೀಡಿದ್ದೇವೆ, ಹಾಗಿರುವಾಗ ಕ್ಷೇತ್ರಗಳ ಮರುವಿಂಗಡಣೆಯ ನಂತರವೇ ಜಾರಿ ಮಾಡುವುದು ಏಕೆ ಎಂದು ಪ್ರಶ್ನಿಸಿದರು.
ಮೋದಿ ಮತ್ತು ಅಮಿತ್ ಶಾ ಸುಳ್ಳು ಹೇಳುವ ಮೂಲಕ ದೇಶವನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಯುವಕರಿಗೆ ಉದ್ಯೋಗ ಕಲ್ಪಿಸುವುದು ಮತ್ತು ವಿವಿಧ ಯೋಜನೆಗಳಿಗೆ ಅನುದಾನ ಒದಗಿಸುವುದು ಸರ್ಕಾರದ ಆದ್ಯತೆಯಾಗಬೇಕು. ಅನುದಾನದ ಕೊರತೆಯಿಂದ ಹಲವು ವಿಶ್ವವಿದ್ಯಾಲಯಗಳು ಸಂಕಷ್ಟ ಎದುರಿಸುತ್ತಿವೆ. ಇಂತಹ ಸಮಸ್ಯೆಗಳನ್ನು ಬಗೆಹರಿಸುವ ಬದಲು ಸರ್ಕಾರ ಬೇರೆ ವಿಚಾರಗಳಿಗೆ ಆದ್ಯತೆ ನೀಡುತ್ತಿದೆ. ದೇಶವನ್ನು ಉಳಿಸಲು ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದರು.
*ಎಸ್‌ಐಆರ್ ರದ್ದುಪಡಿಸಿ, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಿ ಆಗ್ರಹ*
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು ಎಂದು ಖರ್ಗೆ ಆಗ್ರಹಿಸಿದರು. ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ಬಿಜೆಪಿಗೆ ಅನುಕೂಲವಾಗುವಂತೆ ಅಕ್ರಮ ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಇದಕ್ಕೆ ಸಹಕರಿಸಿದ್ದಾರೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು, 2023ರ ಕಾಯ್ದೆಯನ್ನು ಹಿಂಪಡೆಯಬೇಕು ಮತ್ತು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.
ಸಂಸತ್ತಿನಲ್ಲಿ 2023ರಲ್ಲಿ ವಿರೋಧ ಪಕ್ಷಗಳಿಲ್ಲದೆಯೇ ಚುನಾವಣಾ ಆಯುಕ್ತರಿಗೆ ಕಾನೂನು ರಕ್ಷಣೆ ನೀಡುವ ಮಸೂದೆ ಅಂಗೀಕಾರವಾಗಿರುವುದನ್ನು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಟೀಕಿಸಿದರು. ರಾಷ್ಟ್ರಪತಿ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೂ ಇಲ್ಲದ ಸವಲತ್ತುಗಳನ್ನು ಚುನಾವಣಾ ಆಯುಕ್ತರಿಗೆ ಏಕೆ ನೀಡಲಾಗಿದೆ ಎಂದು ಪ್ರಶ್ನಿಸಿದರು.
*ರಾಹುಲ್ ಗಾಂಧಿ ಟೀಕಿಸುವುದೇ ಬಿಜೆಪಿಯ ಕೆಲಸವೇ?*
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ನಾಯಕರು ನಿರಂತರವಾಗಿ ಟೀಕಿಸುತ್ತಿದ್ದಾರೆ ಎಂದು ಹೇಳಿದ ಖರ್ಗೆ, ಕಾಂಗ್ರೆಸ್ ಪ್ರತಿಭಟನೆಯಲ್ಲಿ 8 ಸಾವಿರ ಜನ ಭಾಗವಹಿಸಿದರೆ ಏನಾಗುತ್ತದೆ ಎಂದು ಪ್ರಶ್ನಿಸುತ್ತಾರೆ. ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಪ್ರತಿಭಟನೆ ನಡೆಸಲಾಗುತ್ತದೆ. 8 ರಿಂದ 10 ಸಾವಿರ ಜನ ಸೇರಿದರೆ ಭಯವಿಲ್ಲ ಎನ್ನುತ್ತಾರೆ, ಆದರೆ ಕೋಟ್ಯಂತರ ಜನ ಸೇರಿ ಪ್ರತಿಭಟಿಸಿದರೆ ಒಪ್ಪಿಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದರು.
ನೆಹರು, ಇಂದಿರಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಟೀಕಿಸುವುದನ್ನು ಬಿಟ್ಟು ದೇಶಕ್ಕೆ ಒಳ್ಳೆಯದನ್ನು ಮಾಡಬೇಕು ಎಂದು ಹೇಳಿದರು.
*ಅ.24 ರಂದು INDIA ಮೈತ್ರಿಕೂಟ ಸಭೆ*
INDIA ಮೈತ್ರಿಕೂಟದ ಸಭೆಯು ಅಕ್ಟೋಬರ್ 24 ರಂದು ನಡೆಯಲಿದ್ದು, ಮುಂದಿನ ಕಾರ್ಯಕ್ರಮಗಳು ಮತ್ತು ಹೋರಾಟಗಳ ಬಗ್ಗೆ ಚರ್ಚಿಸಲಾಗುವುದು ಎಂದು ಖರ್ಗೆ ತಿಳಿಸಿದರು.
Kshetra Samachara
21/10/2026 08:01 pm