ಚಿಕ್ಕಮಗಳೂರು: ಟ್ರ್ಯಾಕ್ಟರ್‌ಗೆ ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಮರದ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಸಗನೀಪುರ ಗ್ರಾಮದಲ್ಲಿ ನಡೆದಿದೆ. ತಿಂಗಳ ಹಿಂದೆ ರಾಸುಗಳನ್ನು ಮೇಯಲು ಕರೆದೊಯ್ಯುವಾಗ ಟ್ರ್ಯಾಕ್ಟರ್‌ಗೆ ದಾರಿ ಬಿಡದ ವಿಚಾರವಾಗಿ ನಡೆದ ಮಾತಿನ ಚಕಮಕಿ ಹಾಗೂ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮದನ್ ಎಂಬವರು ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಮಲ್ಲೇಶ, ಮಂಜು ಹಾಗೂ ಮತ್ತೋರ್ವ ಯುವಕ ಏಕಾಏಕಿ ಅಡ್ಡಗಟ್ಟಿ ಮನಸ್ಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ರಸ್ತೆಯ ಮಧ್ಯೆ ಮರದ ದೊಣ್ಣೆಯಿಂದ ಹಲ್ಲೆ ನಡೆಸಿರುವುದು ಮಾತ್ರವಲ್ಲದೆ, ನಂತರ ಮನೆಗೆ ನುಗ್ಗಿ ಕೂಡ ಹಲ್ಲೆ ಮುಂದುವರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಭೀಕರ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಮದನ್ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಈ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
PublicNext
22/10/2026 08:01 pm
LOADING...