ಗದಗ : ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಗದಗ ನಗರದ ನಗರಸಭೆ ಮುಂಭಾಗದ ಮತದಾನ ಕೇಂದ್ರದ ಬಳಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಮತದಾನ ಕೇಂದ್ರದ ಸಮೀಪ ಬಿಜೆಪಿ ಸದಸ್ಯರು ಪಕ್ಷದ ಶಾಲು ಧರಿಸಿಕೊಂಡು ಬಂದಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ನಗರಸಭೆ ಸದಸ್ಯರು ಹಾಗೂ ಕಾರ್ಯಕರ್ತರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
16ನೇ ವಾರ್ಡ್‌ನ ಕಾಂಗ್ರೆಸ್ ನಗರಸಭೆ ಸದಸ್ಯ ಕೃಷ್ಣಾ ಪರಪುರ ಅವರು, ಮತದಾನ ಕೇಂದ್ರದ ಬಳಿ ಬಿಜೆಪಿ ಸದಸ್ಯರು ಪಕ್ಷದ ಶಾಲು ಧರಿಸಿಕೊಂಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು ಎನ್ನಲಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು.
ಇದೇ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಸಂಕನೂರು ಅವರ ಪರವಾಗಿ ಕೆಲವರು ಘೋಷಣೆಗಳನ್ನು ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಕಾರ್ಯಕರ್ತರು, ತಾವು ಯಾವುದೇ ಕಾನೂನು ಉಲ್ಲಂಘನೆ ಮಾಡಿಲ್ಲ ಹಾಗೂ ಮತದಾನ ಕೇಂದ್ರದಿಂದ ದೂರದಲ್ಲಿಯೇ ಇದ್ದೇವೆ ಎಂದು ಸಮರ್ಥಿಸಿಕೊಂಡರು.
ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ಹೆಚ್ಚಾಗದಂತೆ ಪೊಲೀಸರು ಮಧ್ಯಪ್ರವೇಶಿಸಿ, ಉಭಯ ಪಕ್ಷಗಳ ಸದಸ್ಯರು ಹಾಗೂ ಕಾರ್ಯಕರ್ತರನ್ನು ಸಮಾಧಾನಪಡಿಸಿದರು. ಬಳಿಕ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತು.
ಚುನಾವಣೆಯ ಸಂದರ್ಭದಲ್ಲಿ ಮತದಾನ ಕೇಂದ್ರದ ಸುತ್ತಮುತ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯ ಸ್ಥಳದಲ್ಲಿ ವ್ಯಕ್ತವಾಯಿತು.
Kshetra Samachara
23/10/2026 03:04 pm
LOADING...